ಬೆಂಗಳೂರು, ಸೆ 14 (DaijiworldNews/MS): ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಕುಟುಂಬ ಸದಸ್ಯರು ಮತ್ತು ಸಚಿವ ಎಸ್ ಟಿ ಸೋಮಶೇಖರ್ ವಿರುದ್ಧ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಲು ಲೋಕಾಯುಕ್ತದ ಪೊಲೀಸ್ ಇನ್ಸ್ ಪೆಕ್ಟರ್ ಗೆ ಆದೇಶ ನೀಡಿದೆ.
ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ದೂರು ಪರಿಗಣಿಸಿ, ನ್ಯಾಯಾಧೀಶರಾದ ಬಿ ಜಯಂತ್ ಕುಮಾರ್ ಅವರು ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಹಾಗೂ ಐಪಿಸಿಯ ವಿವಿಧ ಸೆಕ್ಷನ್ ಗಳ ಅಡಿ ಅಪರಾಧಕ್ಕೆ ಸಂಬಂಧಿಸಿದಂತೆ ಸಿಆರ್ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಲು ಆದೇಶ ನೀಡಿದ್ದಾರೆ.
ಬಿಎಸ್ವೈ, ಪುತ್ರ ಬಿ ವೈ ವಿಜಯೇಂದ್ರ, ಶಶಿಧರ ಮರಡಿ, ಬಿಎಸ್ವೈ ಪುತ್ರಿ ಪದ್ಮಾವತಿ ಅವರ ಅಳಿಯ ಸಂಜಯ್ ಶ್ರೀ, ಚಂದ್ರಕಾಂತ್ ರಾಮಲಿಂಗಂ, ಅಂದಿನ ಬಿಡಿಎ ಅಧ್ಯಕ್ಷ, ಹಾಲಿ ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಐಎಎಸ್ ಅಧಿಕಾರಿ ಡಾ. ಜಿ ಸಿ ಪ್ರಕಾಶ್, ಕೆ ರವಿ, ಬಿಎಸ್ವೈ ಅಳಿಯ ವಿರೂಪಾಕ್ಷಪ್ಪ ಯಮಕನಮರಡಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಲಾಗಿದೆ.
ನವೆಂಬರ್ 2ರಂದು ಅಂತಿಮ ವರದಿ ಸಲ್ಲಿಸಲು ಪೊಲೀಸ್ ಇನ್ಸ್ಪೆಕ್ಟರ್ ಅವರಿಗೆ ವಿಶೇಷ ನ್ಯಾಯಾಲಯ ಸೂಚನೆ ನೀಡಿದೆ.
ಪ್ರಕರಣವೇನು?: ‘ಬಿಡಿಎ ಗುತ್ತಿಗೆ ಪಡೆಯಲು ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿ ಮತ್ತು ಕೆಲ ಶೆಲ್ ಕಂಪನಿ ಗಳಿಂದ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಕುಟುಂಬದ ಸದಸ್ಯರು ಕೋಟ್ಯಂತರ ರೂಪಾಯಿಗಳ ಲಂಚ ಪಡೆದಿದ್ದಾರೆ’ ಎಂದು ಆರೋಪಿಸಿ ಟಿ.ಜೆ ಅಬ್ರಹಾಂ ಖಾಸಗಿ ದೂರು ದಾಖಲಿಸಿದ್ದರು.