ಲಖ್ನೋ, ಸೆ 15 (DaijiworldNews/DB): ಲಖೀಂಪುರ ಖೇರಿಯಲ್ಲಿ ಅಪ್ರಾಪ್ತ ಬಾಲಕಿಯರಿಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣವನ್ನು ತ್ವರಿತ ನ್ಯಾಯಾಲಯದ ಮೂಲಕ ವಿಚಾರಣೆ ನಡೆಸಲಾಗುವುದು ಎಂದು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಹೇಳಿದ್ದಾರೆ.
ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿದ ಅವರು, ಪ್ರಕರಣದ ಉನ್ನತ ತನಿಖೆಗೆ ಈಗಾಗಲೇ ಆದೇಶಿಸಲಾಗಿದೆ. ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ತ್ವರಿತ ನ್ಯಾಯಾಲಯದ ಮೂಲಕ ಕುಟುಂಬಕ್ಕೆ ನ್ಯಾಯ ಒದಗಿಸಲಾಗುವುದು ಎಂದರು.
ಈಗಾಗಲೇ ಪ್ರಕರಣ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದೆ. ಬಾಲಕಿಯರನ್ನು ಕತ್ತು ಹಿಸುಕಿ ಕೊಂದು ನೇಣು ಹಾಕಿ ಕೊಲೆ ಮಾಡಿದ ಕ್ರೂರ ಕೃತ್ಯ ಇದಾಗಿದೆ. ಮುಂದೆ ಇಂತಹ ಘಟನೆ ಮರುಕಳಿಸಬಾರದು ಮತ್ತು ನಡುಕ ಹುಟ್ಟಿಸುವಂತಹ ಕ್ರಮ ಕೈಗೊಳ್ಳಲಾಗುವುದು ಎಂದವರು ತಿಳಿಸಿದರು.
ಮಕ್ಕಳಿಬ್ಬರನ್ನು ಅಪಹರಿಸಿ ಅತ್ಯಾಚಾರಗೈದು ಕೊಲೆ ಮಾಡಲಾಗಿದೆ ಎಂದು ಮೃತ ಬಾಲಕಿಯರ ತಾಯಿ ಆರೋಪಿಸಿದ್ದಾರೆ. ಅವರು ನೀಡಿದ ದೂರಿನಂತೆ ದೂರು ದಾಖಲಿಸಿಕೊಂಡು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.