ನವದೆಹಲಿ, ಸೆ 16 (DaijiworldNews/HR): ಸಮಾನತೆ ಮತ್ತು ರಾಷ್ಟ್ರೀಯ ಭಾವೈಕ್ಯತೆಯನ್ನು ಉತ್ತೇಜಿಸಲು ವಸ್ತ್ರ ಸಂಹಿತೆಯನ್ನು ಜಾರಿಗೆ ತರಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರಿಂಕೋರ್ಟ್ ಶುಕ್ರವಾರ ವಜಾ ಮಾಡಿದೆ.
ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ನೇತೃತ್ವದ ದ್ವಿಸದಸ್ಯ ಪೀಠವು, ಇದು ನ್ಯಾಯಾಲಯಕ್ಕೆ ಬರಬೇಕಾದ ವಿಷಯವಲ್ಲ ಎಂದು ಅಭಿಪ್ರಾಯಪಟ್ಟಿದೆ.
ಸಮಾನತೆಯನ್ನು ಪಡೆಯಲು ಮತ್ತು ಭ್ರಾತೃತ್ವ ಮತ್ತು ರಾಷ್ಟ್ರೀಯ ಭಾವೈಕ್ಯತೆಯನ್ನು ಉತ್ತೇಜಿಸಲು ವಸ್ತ್ರ ಸಂಹಿತೆಯನ್ನು ಜಾರಿಗೆ ತರಬೇಕು ಎಂದು ಪಿಐಎಲ್ನಲ್ಲಿ ವಾದಿಸಲಾಗಿದ್ದು, ಪಿಐಎಲ್ ಅರ್ಜಿದಾರ ನಿಖಿಲ್ ಉಪಾಧ್ಯಾಯ ಅವರ ಪರ ವಾದ ಮಂಡಿಸಿದ ಹಿರಿಯ ವಕೀಲ ಗೌರವ್ ಭಾಟಿಯಾ, ಇದು ಸಾಂವಿಧಾನಿಕ ವಿಷಯವಾಗಿದ್ದು, ಶಿಕ್ಷಣ ಹಕ್ಕು ಕಾಯ್ದೆಯಡಿ ನಿರ್ದೇಶನ ನೀಡುವಂತೆ ಕೋರಿದ್ದರು.
ಇನ್ನು ನೋಂದಾಯಿತ ಶಿಕ್ಷಣ ಸಂಸ್ಥೆಗಳಲ್ಲಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಸಾಮಾನ್ಯ ವಸ್ತ್ರಸಂಹಿತೆಯನ್ನು ಜಾರಿಗೆ ತರಲು ಕೇಂದ್ರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.