ಫಿರೋಜಾಬಾದ್, ಸೆ 18 (DaijiworldNews/DB): ಎಂಟು ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕನಿಗೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ವಿಜಯ್ ಪಾಲ್ ಸಿಂಗ್ ಶಿಕ್ಷೆಗೊಳಗಾದ ಶಿಕ್ಷಕ. ಈತ ಪ್ರಾಥಮಿಕ ಶಾಲಾ ಶಿಕ್ಷಕನಾಗಿದ್ದು, ಅದೇ ಶಾಲೆಯಲ್ಲಿ ಓದುತ್ತಿದ್ದ ಮೂರನೇ ತರಗತಿಯ ಎಂಟು ವರ್ಷದ ಬಾಲಕನ ಮೇಲೆ ಏಳು ವರ್ಷಗಳ ಹಿಂದೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಹಲವು ಬಾರಿ ಈ ರೀತಿಯ ದೌರ್ಜನ್ಯ ಎಸಗಿರುವ ಕುರಿತು ಬಾಲಕ ಪೋಷಕರಲ್ಲಿ ಹೇಳಿಕೊಂಡಿದ್ದು, ಸನಿಹದ ಪೊಲೀಸ್ ಠಾಣೆಯಲ್ಲಿ ಪೋಷಕರು ದೂರು ನೀಡಿದ್ದರು. ಅಲ್ಲದೆ, ದೌರ್ಜನ್ಯದ ಬಳಿಕ ಯಾರಿಗಾದರೂ ವಿಷಯ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಬಳಿಕ ಆರೋಪಿ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ತಪ್ಪೊಪ್ಪಿಕೊಂಡಿದ್ದ.
ಶಿಕ್ಷಕನ ವಿರುದ್ಧ ಐಪಿಸಿ ಸೆಕ್ಷನ್ 377, 507 (ಕ್ರಿಮಿನಲ್ ಬೆದರಿಕೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯದಲ್ಲಿ ತೀರ್ಪು ಪ್ರಕಟಗೊಂಡಿದ್ದು ಆರೋಪಿ ಶಿಕ್ಷಕನಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ 30,000 ರೂ. ದಂಡ ವಿಧಿಸಿ ನ್ಯಾಯಾಲಯವು ಆದೇಶ ಹೊರಡಿಸಿದೆ.