ಮೈಸೂರು, ಸೆ 18 (DaijiworldNews/SM): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಉದ್ಘಾಟಿಸಲಿದ್ದಾರೆ
ಪದವಿಗೇರಿದ ಬಳಿಕ ಚೊಚ್ಚಲ ಬಾರಿಗೆ ಮೈಸೂರಿಗೆ ಭೇಟಿ ನೀಡುತ್ತಿರುವ ರಾಷ್ಟ್ರಪತಿಗೆ ಅದ್ಧೂರಿ ಸ್ವಾಗತ ನೀಡಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ.
ಮೈಸೂರು ದಸರಾ ಉದ್ಘಾಟನೆಗೆ ಆಗಮಿಸುತ್ತಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕಾರ್ಯಕ್ರಮ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ.
ಸೆಪ್ಟೆಂಬರ್ 26ರ ಸೋಮವಾರ ಬೆಳಗ್ಗೆ 6.15ಕ್ಕೆ ವಿಶೇಷ ವಿಮಾನದಲ್ಲಿ ರಾಷ್ಟ್ರಪತಿ ಮುರ್ಮು ಅವರು ದೆಹಲಿಯಿಂದ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಸೆಪ್ಟೆಂಬರ್ 26ರ ಬೆಳಗ್ಗೆ 9 ಗಂಟೆಗೆ ಮಂಡಕಳ್ಳಿ ಏರ್ಪೋರ್ಟ್ಗೆ ಆಗಮಿಸಲಿದ್ದಾರೆ. ನಂತರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಬಳಿಕ ದ್ರೌಪದಿ ಮುರ್ಮು ಅವರು ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸೋಮವಾರ ಬೆಳಗ್ಗೆ 10 ಗಂಟೆಗೆ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ.
ಬೆಳಗ್ಗೆ 10:45ಕ್ಕೆ ಚಾಮುಂಡಿ ಬೆಟ್ಟದಿಂದ ಮುರ್ಮು ಹೊರಡಲಿದ್ದಾರೆ ಎಂದು ತಿಳಿದುಬಂದಿದೆ.