ನವದೆಹಲಿ, ಸೆ 23 (DaijiworldNews/MS): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಸುಪ್ರೀಂ ಕೋರ್ಟ್ನಿಂದ ರಿಲೀಫ್ ಸಿಕ್ಕಿದೆ. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಕುಟುಂಬ ಸದಸ್ಯರ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಇತ್ತೀಚೆಗೆ ಹೈಕೋರ್ಟ್ ಬಿಎಸ್ವೈ ಕುಟುಂಬದ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು. ಈ ಬಗ್ಗೆ ಬಿಎಸ್ವೈ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಈ ಸಂಬಂಧ ಮಧ್ಯಂತರ ಆದೇಶ ನೀಡಿರುವ ಸುಪ್ರೀಂ ಕೋರ್ಟ್ ತನಿಖೆಗೆ ತಡೆ ನೀಡಿದೆ. ಆದರೆ ವಿಜಯೇಂದ್ರ ಸೇರಿದಂತೆ ಉಳಿದವರ ವಿರುದ್ಧ ತನಿಖೆ ನಡೆಯಲಿದೆ.
ಇನ್ನೊಂದೆಡೆ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಅವರ ಪುತ್ರ ಬಿ ವೈ ವಿಜಯೇಂದ್ರ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಮಾಜಿ ಅಧ್ಯಕ್ಷ, ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಸೇರಿದಂತೆ ಒಂಭತ್ತು ಮಂದಿಯ ವಿರುದ್ಧ ಲೋಕಾಯುಕ್ತ ಪೊಲೀಸರು ಶುಕ್ರವಾರ ಎಫ್ಐಆರ್ ದಾಖಲಿಸಿ, ಅದನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬಸ್ಥರು ಅಧಿಕಾರ ದುರ್ಬಳಕೆ ಮಾಡಿಕೊಂಡು ಕೋಟ್ಯಂತರ ರೂಪಾಯಿ ಲಂಚವನ್ನು ನಗದಿನ ರೂಪದಲ್ಲಿ ಮತ್ತು ಶೆಲ್ ಕಂಪೆನಿಗಳ ಮೂಲಕ ಪಡೆದಿರುವ ಆರೋಪವಿದೆ.