ಮೈಸೂರು, ಸೆ 26 (DaijiworldNews/MS): ನಾಡಹಬ್ಬ ದಸರಾಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ದಸರಾ ಉತ್ಸವ ಉದ್ಘಾಟನೆಗೆ ಮುನ್ನ ರಾಷ್ಟ್ರಪತಿ ದ್ರೌಪದಿ ರ್ಮುರ್ಮು ಅವರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ, ದೇವಿ ದರ್ಶನ ಪಡೆದುಕೊಂಡು ಪೂಜೆ ಸಲ್ಲಿಸಿದರು. ದೇವಸ್ಥಾನದ ಕುರಿತು ಮಾಹಿತಿ ಪಡೆದುಕೊಂಡರು. ಬಳಿಕ ಅವರು ವೇದಿಕೆಗೆ ಆಗಮಿಸುತ್ತಿದ್ದಂತೆಯೇ ಪೊಲೀಸ್ ಬ್ಯಾಂಡ್ ವತಿಯಿಂದ ರಾಷ್ಟ್ರಗೀತೆ ಮೊಳಗಿತು.
ದಸರಾ ಉದ್ಘಾಟನೆ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೊತ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವಾರು ಗಣ್ಯರು ಹಾಜರಿದ್ದರು. ಇದಕ್ಕೂ ಮುಂಚೆ ಇಲ್ಲಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೊತ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬರಮಾಡಿಕೊಂಡರು.