ಚಿತ್ರದುರ್ಗ, ಸೆ 27 (DaijiworldNews/MS): ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೋಕ್ಸೋ ಪ್ರಕರಣದ ಅಡಿಯಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಬೃಹನ್ಮಠದ ಮುರುಘಾ ಶ್ರೀ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು, ಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಿ ಆದೇಶ ನೀಡಿದೆ.
ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಜೈಲುಪಾಲಾಗಿದ್ದ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಅಂತ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಶ್ರೀಗಳನ್ನು ಇಂದು ಚಿತ್ರದುರ್ಗದ ಎರಡನೇ ಸತ್ರ ನ್ಯಾಯಾಲಯಕ್ಕೆ ಮತ್ತೆ ಹಾಜರುಪಡಿಸಲಾಗಿತ್ತು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಇದರೊಂದಿಗೆ ಶ್ರೀಗಳ ಜೈಲುವಾಸ ಮುಂದುವರಿದಿದ್ದು, ಬಿಡುಗಡೆ ಭಾಗ್ಯ ಮರೀಚಿಕೆಯಾಗಿಯೇ ಉಳಿದಿದೆ.