ಬೆಂಗಳೂರು, ನ 18 (DaijiworldNews/MS): ಮತದಾರರ ಪಟ್ಟಿ ಪರಿಷ್ಕರಣೆ ಹಗರಣವನ್ನು ಸರ್ಕಾರ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಕಾಂಗ್ರೆಸ್ ಬಿಗಿಪಟ್ಟು ಹಿಡಿದಿದೆ.
ನಾಳೆ ಮಧ್ಯಾಹ್ನದ ಒಳಗೆ ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶ ನೀಡಬೇಕು ಎಂದು ಕೆಪಿಸಿಸಿ ಆಧ್ಯಕ್ಷ ಡಿ.ಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.
ಒಂದು ವೇಳೆ ಸರ್ಕಾರ ಈ ಬಗ್ಗೆ ನಿರ್ಲಕ್ಷ್ಯ ಧೋರಣೆ ತಾಳಿದರೆ ಚುನಾವಣೆ ಆಯೋಗದ ಬಳಿ ಪ್ರಕರಣ ಕೊಂಡೊಯ್ಯುತ್ತೇವೆ ಎಂದು ಡಿಕೆಶಿ ಖಡಕ್ ಆಗಿ ಹೇಳಿದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣೆಯ ನೆಪದಲ್ಲಿ ಅಕ್ರಮವಾಗಿ ಮತದಾರರ ಮಾಹಿತಿ ಸಂಗ್ರಹಿಸಿ, ಅದನ್ನು ರಾಜಕೀಯ ಸ್ವಾರ್ಥಕ್ಕಾಗಿ ಬಿಜೆಪಿ ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ನಿನ್ನೆ ತಾನೆ ಮಾಜಿ ಸಿಎಂ, ಸಿದ್ದರಾಮಯ್ಯ, ಡಿಕೆಶಿ ಅವರನ್ನೊಳಗೊಂಡ ಕಾಂಗ್ರೆಸ್ ನಾಯಕ ತಂಡ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಗೆ ದೂರು ಸಲ್ಲಿಸಿತ್ತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ರಾಜೀನಾಮೆ ನೀಡಿ ,ಸಿಎಂ ಸೇರಿದಂತೆ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಅಧಿಕಾರಿಗಳನ್ನು ತಕ್ಷಣ ಬಂಧಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿತ್ತು.