ಬೆಂಗಳೂರು, ನ 19 (DaijiworldNews/DB): ತಮಾಷೆಗೆಂದು ಪಾಕ್ ಪರ ಘೋಷಣೆ ಕೂಗಿದ್ದ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿ ಬಳಿಕ ಎಚ್ಚರಿಕೆ ನೀಡಿ ಬಿಡುಗಡೆಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಕಾಲೇಜಿನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಆಂಧ್ರಪ್ರದೇಶ ಮೂಲದ ಆರ್ಯನ್, ಮಹಾರಾಷ್ಟ್ರದ ರಿಯಾ ರವಿಚಂದ್ರನ್ ಮತ್ತು ಪಂಜಾಬ್ನ ದಿನಕರ್ ಎಂಬ ವಿದ್ಯಾರ್ಥಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಈ ವೇಳೆ ಮೂವರು ವಿದ್ಯಾರ್ಥಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ್ದರು. ಅಲ್ಲದೆ ಮೂವರನ್ನು ಮಾರತಹಳ್ಳಿ ಪೊಲೀಸರು ಬಂಧಿಸಿ ಐಪಿಸಿ ಸೆಕ್ಷನ್ 153, 505(1) ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದರು.
ಪೊಲೀಸರ ವಿಚಾರಣೆ ವೇಳೆ ತಮಾಷೆಗಾಗಿ ಈ ರೀತಿಯ ಘೋಷಣೆ ಕೂಗಿದ್ದಾಗಿ ವಿದ್ಯಾರ್ಥಿಗಳು ಹೇಳಿಕೊಂಡಿದ್ದಾರೆ. ಆ ಬಳಿಕ ವಿದ್ಯಾರ್ಥಿಗಳಿಗೆ ಬುದ್ದಿವಾದ ಹೇಳಿ ಎಚ್ಚರಿಕೆ ನೀಡಿ ಪೊಲೀಸರು ಬಿಡುಗಡೆಗೊಳಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.