ಬಿಹಾರ, ನ 21 (DaijiworldNews/DB): ಧಾರ್ಮಿಕ ಮೆರವಣಿಗೆಯೊಂದರಲ್ಲಿ ಪಾಲ್ಗೊಂಡವರ ಮೇಲೆ ಟ್ರಕ್ ಹರಿದು 7 ಮಕ್ಕಳು ಸೇರಿ 12 ಮಂದಿ ದುರ್ಮರಣಕ್ಕೀಡಾದ ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ.
ವೈಶಾಲಿ ಜಿಲ್ಲೆಯ ನಯಾಗಾಂವ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಧಾರ್ಮಿಕ ಮೆರವಣಿಗೆ ಸಾಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಟ್ರಕ್ ಮೆರವಣಿಗೆಯಲ್ಲಿ ಪಾಲ್ಗೊಂಡವರ ಮೇಲೆ ಹರಿದಿದೆ. ಇದರಿಂದ ಏಳು ಮಕ್ಕಳು ಸೇರಿ 12 ಮಂದಿ ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರ ಕುಟುಂಬಕ್ಕೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿದವರಿಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೂ ಕಂಬನಿ ಮಿಡಿದಿದ್ದಾರೆ. ತುರ್ತು ಪರಿಹಾರ ಕಾರ್ಯ ಕೈಗೊಳ್ಳುವಂತೆ ಬಿಹಾರ ಸಿಎಂ ನಿತೀಶ್ಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದು, ಹೆಚ್ಚಿನ ಪರಿಹಾರಧನ ವಿತರಣೆಗೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.