ಬೆಂಗಳೂರು, ನ 24 (DaijiworldNews/SM): ಮಾತುಕತೆ ಮೂಲಕ ಗಡಿ ವಿವಾದವನ್ನು ಬಗೆಹರಿಸಿಕೊಳ್ಳಬೇಕು ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹೇಳಿಕೆ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿ ಮುಂದಿನ ನಿರ್ಧಾರಕ್ಕೆ ಬರಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರು ಹೇಳಿರುವುದನ್ನು ಗಮನಿಸಿದ್ದೇನೆ. ಈ ಬಗ್ಗೆ ನಾನು ಏಕಾಂಗಿಯಾಗಿ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಈ ಕಾರಣದಿಂದಾಗಿ ಸರ್ವಪಖದ ಸಭೆಯನ್ನು ಕರೆಯಲಾಗಿದೆ. ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಮಹಾರಾಷ್ಟ್ರ ಸರ್ಕಾರವೇ ಸುಪ್ರೀಂ ಕೋರ್ಟ್ನಲ್ಲಿ ದಾವೆ ಹೂಡಿದೆ. ನಾವು ವಾದ ಮಂಡನೆಗೆ ಸಮರ್ಥವಾಗಿ ತಯಾರಿ ಮಾಡಿಕೊಂಡಿದ್ದೇವೆ. ಈ ಮಧ್ಯೆ ಮಾತುಕತೆ ನಡೆಸುವ ಕುರಿತು ಹೇಳಿಕೆ ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್ನಲ್ಲಿ ವಾದ ಮಾಡುವ ಬಗ್ಗೆ ಈ ಹಿಂದೆ ನಡೆದ ಸರ್ವಪಕ್ಷ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು ಎಂದು ಸಿಎಂ ಹೇಳಿದರು.