ಬೆಳಗಾವಿ, ಡಿ 08( DaijiworldNews/MS): ಬೆಳಗಾವಿ ಗಡಿ ವಿವಾದವನ್ನು ಬೆಳೆಯಲು ಬಿಟ್ಟು ರಾಜ್ಯ ಸರ್ಕಾರವು ಚಂದ ನೋಡುತ್ತ ಕುಳಿತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಗಡಿ ವಿವಾದ ಬಗ್ಗೆ ಸರಣಿ ಟ್ವೀಟ್ ಮಾಡಿದ ಅವರು,"ವಿವಾದಗಳನ್ನು ಬೆಳೆಯಲು ಬಿಟ್ಟು ರಾಜಕೀಯಕ್ಕೆ ಬಳಸುವುದು ಬಿಜೆಪಿ ಪಕ್ಷದ ಹುಟ್ಟುಗುಣ. ಸಂಧಾನದ ಮೂಲಕ ಪರಿಹರಿಸಬೇಕಿದ್ದ ಬೆಳಗಾವಿ ಗಡಿ ವಿವಾದವನ್ನು ಬೆಳೆಯಲು ಬಿಟ್ಟು ರಾಜ್ಯ ಸರ್ಕಾರ ಚಂದ ನೋಡುತ್ತಾ ಕೂತಿದೆ.ಬೆಳಗಾವಿ-ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತಗೊಂಡಿರುವ ಕಾರಣ ಜನ ಪರದಾಡುವಂತಾಗಿದೆ. ಎರಡೂ ಕಡೆಗಳಲ್ಲಿ ಜನ ಉದ್ರಿಕ್ತರಾಗಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಶಾಂತಿ ಕಾಪಾಡಬೇಕು " ಎಂದು ಮನವಿ ಮಾಡಿದ್ದಾರೆ.
ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ವಿರುದ್ಧ ಅಲ್ಲಿನ ಸರ್ಕಾರ ಅತಿರೇಕದ ಕ್ರಮಗಳಿಗೆ ಮುಂದಾಗಿದೆ. ಮುಖ್ಯಮಂತ್ರಿ ಬಿ.ಎಸ್ ಬೊಮ್ಮಾಯಿ ಅವರು ಆ ರಾಜ್ಯದ ಮುಖ್ಯಮಂತ್ರಿಗಳನ್ನು ಸಂಪರ್ಕಿಸಿ ಮಹಾರಾಷ್ಟ್ರದ ಕನ್ನಡಿಗರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಡಬಲ್ ಎಂಜಿನ್ ಸರ್ಕಾರ ಎಂದು ಎದೆ ಬಡಿದುಕೊಂಡರೆ ಸಾಲದು. ಆ ಅವಕಾಶವನ್ನು ಬಳಸಿಕೊಂಡು ಎರಡು ರಾಜ್ಯಗಳಿಗೆ ಸಂಬಂಧಿಸಿದ ವಿವಾದಗಳನ್ನು ಬಗೆಹರಿಸಿಕೊಳ್ಳಲು ಕೇಂದ್ರ ಸರ್ಕಾರದ ನೆರವನ್ನು ಪಡೆಯಬೇಕು ಎಂದು ಸಲಹೆ ನೀಡಿದ್ದಾರೆ.