ಶಿಮ್ಲಾ, ಡಿ 09 (DaijiworldNews/DB): ಹಿಮಾಚಲ ಪ್ರದೇಶದಲ್ಲಿ ಸರ್ಕಾರ ರಚಿಸುವ ಸಲುವಾಗಿ ಕಾಂಗ್ರೆಸ್ ನಾಯಕರು ಇಂದು ರಾಜ್ಯಪಾಲರನ್ನು ಭೇಟಿ ಮಾಡಿ ಹಕ್ಕು ಮಂಡಿಸಿದ್ದಾರೆ.
ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಕಾಂಗ್ರೆಸ್ ನಾಯಕರು ಭೇಟಿಯಾದರು. ಸರ್ಕಾರ ರಚಿಸುವ ಸಂಬಂಧ ಶಾಸಕರ ಪಟ್ಟಿಯನ್ನು ಈ ವೇಳೆ ರಾಜ್ಯಪಾಲರಿಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿದು ಬಂದಿದೆ. ಹಿಮಾಚಲ ಪ್ರದೇಶ ಕಾಂಗ್ರೆಸ್ ಉಸ್ತುವಾರಿ ರಾಜೀವ್ ಶುಕ್ಲಾ, ಪಕ್ಷದ ವೀಕ್ಷಕರಾದ ಭೂಪೇಶ್ ಬಘೇಲ್ ಮತ್ತು ಬಿಎಸ್ ಹೂಡಾ ಅವರು ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ ಎನ್ನಲಾಗಿದೆ.
ನಿನ್ನೆಯಷ್ಟೇ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದುಕೊಂಡಿತ್ತು. 68 ಸದಸ್ಯ ಬಲದ ಹಿಮಾಚಲಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್ 40 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.