ಕಲಬುರ್ಗಿ,ಮಾ 04(MSP): ಮೈತ್ರಿ ಸರ್ಕಾರದ ವಿರುದ್ಧ ಭಿನ್ನಮತಕ್ಕೆ ಪ್ರಥಮ ವಿಕೆಟ್ ಪತನವಾಗಿದ್ದು, ತಮ್ಮ ಶಾಸಕ ಸ್ಥಾನಕ್ಕೆ ಉಮೇಶ್ ಜಾಧವ್ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಕಲಬುರ್ಗಿಯ ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ಉಮೇಶ್ ಜಾಧವ್ ಅವರು ಖುದ್ದು ಸ್ಪೀಕರ್ ರಮೇಶ್ ಕುಮಾರ್ ಅವರ ನಿವಾಸಕ್ಕೆ ತೆರಳಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಸಚಿವ ಸ್ಥಾನ ನೀಡದೆ ತಮ್ಮನ್ನು ಪಕ್ಷದಲ್ಲಿ ಮೂಲೆಗುಂಪು ಮಾಡಲಾಗುತ್ತಿದೆ ಎಂದು ಚಿಂಚೋಳಿ ಕಾಂಗ್ರೆಸ್ ಶಾಸಕ ಹಲವಾರು ಬಾರಿ ಆರೋಪಿಸಿದ್ದರು. ಈ ಹಿನ್ನಲೆಯಲ್ಲಿ ಮಾ.4 ರ ಸೋಮವಾರ ಬೆಳಗ್ಗೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ನಲ್ಲಿರುವ ಸ್ಪೀಕರ್ ರಮೇಶ್ ಕುಮಾರ್ ನಿವಾಸಕ್ಕೆ ತೆರಳಿದ್ದ ಉಮೇಶ್ ಜಾಧವ್ ರಾಜಿನಾಮೆ ಪತ್ರ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಶಾಸಕ ಸ್ಥಾನಕ್ಕೆ ಮಾತ್ರವಲ್ಲದೆ ಕಾಂಗ್ರೆಸ್ ಪಕ್ಷಕ್ಕೂ ಗುಡ್ ಬೈ ಹೇಳಲಿದ್ದಾರೆ ಎನ್ನುವ ವಂದತಿ ಬಲವಾಗಿ ಹರಡಿದ್ದು, ಮಾ.೬ ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರ್ಗಿಯಲ್ಲಿ ನಡೆಯಲಿರುವ ಬಿಜೆಪಿ ಸಮಾವೇಶದಲ್ಲಿ ಜಾಧವ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.