ನವದೆಹಲಿ, ಮಾ 18 (DaijiworldNews/DB): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ದ ಲೋಕಸಭೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನಿವಾಸದ ಮುಂಭಾಗ ಕಾಂಗ್ರೆಸ್ ಮಹಿಳಾ ಘಟಕವು ಶನಿವಾರ ಪ್ರತಿಭಟನೆ ನಡೆಸಿತು.
ಈ ವೇಳೆ ದೆಹಲಿ ಪ್ರದೇಶ ಮಹಿಳಾ ಕಾಂಗ್ರೆಸ್ ಮುಖ್ಯಸ್ಥೆ ಅಮೃತಾ ಧವನ್ ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ಮಹಿಳೆಯರನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದರು.
ಇನ್ನು ಈ ಸಂಬಂಧ ಟ್ವೀಟ್ ಮಾಡಿರುವ ದೆಹಲಿ ಮಹಿಳಾ ಕಾಂಗ್ರೆಸ್, ನಮ್ಮ ನಾಯಕ ರಾಹುಲ್ ಗಾಂಧಿ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ನಮಗೆ ಸಂಸತ್ನಲ್ಲಿ ಮಾತನಾಡಲು ಅವಕಾಶ ನಿರಾಕರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜೆ.ಪಿ. ನಡ್ಡಾ ನಿವಾಸದ ಮುಂಭಾಗ ನಾವು ಪ್ರತಿಭಟನೆ ಮಾಡಿದ್ದೇವೆ. ಆದರೆ ನಮ್ಮನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದಿದೆ.
ಇನ್ನು ಈ ವಿಚಾರವಾಗಿ ಮಾತನಾಡಿದ ದೆಹಲಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, 15 ಮಹಿಳೆಯರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಳಿಕ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.