ಬೆಳಗಾವಿ, ಮಾ 20 (DaijiworldNews/HR): ಅದಾನಿ ಅವರ ಬಗ್ಗೆ ರಾಹುಲ್ ಗಾಂಧಿ ಅವರು ಪ್ರಶ್ನೆ ಕೇಳಿದರೆ ಅದನ್ನು ಕಡತದಿಂದ ತೆಗೆದು ಹಾಕುತ್ತಾರೆ. ದೇಶದಲ್ಲಿ ಪ್ರಜಾಪ್ರಭುತ್ವವಿಲ್ಲ, ಜಾತಿವಾದ, ತಾರತಮ್ಯವಿದೆ ಎಂದು ಹೇಳಿದರೆ ಅದು ತಪ್ಪಾ? ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಮೋದಿ ಅವರು ನನ್ನ ರಿಮೋಟ್ ಕಟ್ರೋಲ್ ಬೇರೆಯವರ ಬಳಿ ಇದೆ ಎಂದಿದ್ದಾರೆ. ಹಾಗಾದರೆ ನಿಮ್ಮ ನಡ್ಡಾ ಅವರ ರಿಮೋಟ್ ಕಂಟ್ರೋಲ್ ಯಾರ ಬಳಿ ಇದೆ? ಎಂದು ಕಿಡಿ ಕಾರಿದ್ದಾರೆ.
ಇನ್ನು ನಾನು ಎಐಸಿಸಿ ಅಧ್ಯಕ್ಷನಾದ ನಂತರ ಮೊದಲ ಬಾರಿಗೆ ಬೆಳಗಾವಿಯ ಪವಿತ್ರ ಭೂಮಿಯ ಮೇಲೆ ಕಾಲಿಟ್ಟಿದ್ದೇನೆ. ಮಹಾತ್ಮಾ ಗಾಂಧೀಜಿ ಅವರು ಇದೇ ನೆಲದಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಚುನಾಯಿತರಾಗಿದ್ದರು.ತಾವೆಲ್ಲರೂ ಸೇರಿ ಈಗ ನನ್ನನ್ನು ಅದೇ ಸ್ಥಾನದಲ್ಲಿ ಕೂರಿಸಿದ್ದೀರಿ, ಅದಕ್ಕಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.