ಬೆಂಗಳೂರು, ಮಾ 21 (DaijiworldNews/SM): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. ವಿದ್ಯಾರ್ಥಿಗಳು ಅಂತಿಮ ಪರೀಕ್ಷೆಗಾಗಿ ತಯಾರಿ ನಡೆಸುತ್ತಿದ್ದಾರೆ. 2023ನೇ ಸಾಲಿನ ಪರೀಕ್ಷೆಗಳು ಮಾರ್ಚ್ 31 ರಿಂದ ಏಪ್ರಿಲ್ 15 ವರೆಗೆ ನಡೆಯಲಿವೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಸಂಚಾರ ನಡೆಸಬಹುದಾಗಿದೆ. ಮಂಗಳವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಸಿ ಮತ್ತು ಜಾ) ನಿರ್ದೇಶಕರು ಆದೇಶವೊಂದನ್ನು ಹೊರಡಿಸಿದ್ದಾರೆ.
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುವ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡುವ ಕುರಿತ ಆದೇಶ ಇದಾಗಿದೆ. ರಾಷ್ಟ್ರೀಯ ಹೆದ್ದಾರಿ 766ರಲ್ಲೂ ಈಗ ಸಮಸ್ಯೆ, ಪ್ರಯಾಣಿಕರಿಗೆ ಸಂಕಷ್ಟ ಆದೇಶದಲ್ಲಿ 2022-23ನೇ ಸಾಲಿನ ಕರ್ನಾಟಕದ ಎಸ್ಎಸ್ಎಲ್ಸಿ ಅಂತಿಮ ಪರೀಕ್ಷೆಗಳನ್ನು ಸರ್ಕಾರದ ಆದೇಶದಂತೆ ದಿನಾಂಕ 31/3/2023 ರಿಂದ 15/4/2023ರವರೆಗೆ ನಡೆಸಲು ತೀರ್ಮಾನಿಸಿದ್ದು, ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುವ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡುವಂತೆ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕೋರಿದ್ದರು ಎಂದು ಹೇಳಿದೆ.
ರಾಜ್ಯದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, 2022-23ನೇ ಸಾಲಿನಲ್ಲಿ ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಅಂದರೆ ದಿನಾಂಕ 31/3/2023 ರಿಂದ 15/4/2023 ರವರೆಗೆ ಪರೀಕ್ಷಾ ದಿನಗಳಂದು ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ತೆರಳಲು ಮತ್ತು ವಾಪಸ್ ಮರಳಲು ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.