ನವದೆಹಲಿ, ಮಾ 22 (DaijiworldNews/DB): ದೆಹಲಿ ಮದ್ಯ ನೀತಿ ಅಕ್ರಮ ಆರೋಪದಲ್ಲಿ ಜೈಲು ಸೇರಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿ ಏಪ್ರಿಲ್ 5ರವರೆಗೆ ವಿಸ್ತರಣೆಯಾಗಿದೆ.
ಮನೀಶ್ ಸಿಸೋಡಿಯಾ ಅವರು ಜಾಮೀನು ಕೋರಿ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಅರ್ಜಿ ತಿರಸ್ಕರಿಸಿದ ನ್ಯಾಯಾಲಯ ನ್ಯಾಯಾಂಗ ಬಂಧನ ಅವಧಿಯನ್ನು ಏಪ್ರಿಲ್ 5ರವರೆಗೆ ವಿಸ್ತರಿಸಿ ಆದೇಶಿಸಿದೆ. ವಿಶೇಷ ನ್ಯಾಯಾಧೀಶ ಎಂ.ಕೆ.ನಾಗಪಾಲ್ ಅವರು ಅರ್ಜಿ ವಿಚಾರಣೆ ನಡೆಸಿದ್ದರು.
ಮದ್ಯ ನೀತಿಯಲ್ಲಿನ ಅಕ್ರಮ ಆರೋಪದ ಮೇರೆಗೆ ಫೆಬ್ರವರಿ 26ರಂದು ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು. ಇನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಮಾರ್ಚ್ 9ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಿಸೋಡಿಯಾ ಅವರನ್ನು ಬಂಧಿಸಿದ್ದರು. ಇದೀಗ ಅವರನ್ನು ಇಡಿ ಮತ್ತು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಪತ್ನಿಗೆ ಅನಾರೋಗ್ಯ ಕಾಡುತ್ತಿದ್ದು, ಆಕೆಯ ಕಾಳಜಿ ಮಾಡಬೇಕಿದೆ. ಪುತ್ರ ವಿದ್ಯಾಭ್ಯಾಸದ ಹಿನ್ನೆಲೆಯಲ್ಲಿ ವಿದೇಶದಲ್ಲಿರುವುದರಿಂದ ಪತ್ನಿಯ ಆರೈಕೆ ಹಿನ್ನೆಲೆಯಲ್ಲಿ ಜಾಮೀನು ನೀಡಬೇಕು ಎಂದು ಕೋರಿ ಅವರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.