ಬೆಂಗಳೂರು, ಮಾ 22 (DaijiworldNews/DB): ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್ ಅವರು ಬಿಜೆಪಿ ತೊರೆದು ಸದಾಶಿವನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್ ಸೇರ್ಪಡೆ ಬಳಿಕ ಮಾತನಾಡಿದ ಚಿಂಚನಸೂರು, ನಾನೆಂದಿಗೂ ಅವಕಾಶವಾದಿ ರಾಜಕಾರಣಿಯಲ್ಲ. ಆದರೆ ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಬಂದ ಬಳಿಕ ನನ್ನ ಸಾಮರ್ಥ್ಯದ ಅರಿವು ಕೆಲವರಿಗೆ ಆಗಲಿದೆ. ಬಿಜೆಪಿ ನನ್ನ ಪಾಲಿಗೆ ಮುಗಿದ ಅಧ್ಯಾಯ ಎಂದರು.
ಟಿಕೆಟ್ ನೀಡುವುದು ಬಿಡುವುದು ಹೈಕಮಾಂಡ್ಗೆ ಬಿಟ್ಟ ವಿಚಾರ. ಡಿ.ಕೆ. ಶಿವಕುಮಾರ್ ಋಣ ತೀರಿಸುವುದಕ್ಕಾಗಿ ಕೆಲಸ ಮಾಡುತ್ತೇನೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೆಲಸ ಮಾಡುವ ಮೂಲಕ ಹೆಚ್ಚು ಸ್ಥಾನ ಪಡೆಯುವಲ್ಲಿ ಶ್ರಮಿಸುತ್ತೇನೆ ಎಂದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆಗಿನ ಭಿನ್ನಾಭಿಪ್ರಾಯ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಖರ್ಗೆ ಮತ್ತು ನನ್ನ ನಡುವಿನ ಜಗಳ ತಂದೆ ಮಗನ ಜಗಳ. ಮುಂದೆ ಈ ಭಿನ್ನಾಭಿಪ್ರಾಯ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸೋಮವಾರವಷ್ಟೇ ರಾಜೀನಾಮೆ ನೀಡಿದ್ದ ಚಿಂಚನಸೂರ್ ಇದೀಗ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಗುರುಮಿಠಕಲ್ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೇಳಿದ್ದ ಚಿಂಚನಸೂರ್ ಅವರಿಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಕಾಂಗ್ರೆಸ್ನಲ್ಲಿದ್ದ ಚಿಂಚನಸೂರ್ 2019 ರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಇದೀಗ ಮತ್ತೆ ಮೂಲ ಪಕ್ಷಕ್ಕೆ ಹಿಂತಿರುಗಿದ್ದಾರೆ.