ಹುಬ್ಬಳ್ಳಿ, ಮಾ 28 (DaijiworldNews/DB): ಚುನಾವಣೆ ಘೋಷಣೆಯಾದ ಬಳಿಕ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದು ಬಿಜೆಪಿ ಸಂಸ್ಕೃತಿ. ಕರ್ನಾಟಕದಲ್ಲಿಯೂ ಇದೇ ಮಾದರಿ ಅನುಸರಿಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಂಗಳವಾರ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಗುಜರಾತ್, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಚುನಾವಣೆ ದಿನಾಂಕ ಘೋಷಣೆಯಾದ ಕೂಡಲೇ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ನಡೆದು ಪಟ್ಟಿ ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿಯೂ ಇದೇ ಮಾದರಿ ಅನುಸರಿಸಲಾಗುತ್ತದೆ. ಇದು ನಮ್ಮ ಪಕ್ಷದ ಸಂಸ್ಕೃತಿ ಎಂದರು.
ಇನ್ನು ಯಡಿಯೂರಪ್ಪ ಅವರ ನಿವಾಸದಕ್ಕೆ ಪ್ರತಿಭಟನಾಕಾರರ ತಂಡ ಕಲ್ಲು ತೂರಾಟ ನಡೆಸಿದ ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ಮೀಸಲಾತಿ ವಿಚಾರದಲ್ಲಿ ಯಾರಿಗೆ ಗೊಂದಲ ಇದೆಯೋ ಅವರು ನೇರವಾಗಿ ಮುಖ್ಯಮಂತ್ರಿ ಅಥವಾ ಸಂಬಂಧಪಟ್ಟ ಸಚಿವರೊಂದಿಗೆ ಭೇಟಿಯಾಗಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗಲೂ ಒಳ ಮೀಸಲಾತಿ ಬೇಡಿಕೆ ಇತ್ತು. ಆದರೆ ಅವರು ಅದನ್ನು ಈಡೇರಿಸುವ ಪ್ರಯತ್ನಕ್ಕೆ ಹೋಗಿಲ್ಲ. ನಮ್ಮ ಸರ್ಕಾರ ತೆಗೆದುಕೊಂಡ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆ ಮೂಲಕ ಕಾಂಗ್ರೆಸ್ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಹರಿಹಾಯ್ದರು.