ಬೆಂಗಳೂರು, ಮಾ 28 (DaijiworldNews/MS): ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಐದು ದಿನಗಳ ಕಾಲ ಲೋಕಾಯುಕ್ತ ವಶಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.
ಪುತ್ರ ಪ್ರಶಾಂತ್ ನಿವಾಸದಲ್ಲಿ ದಾಖಲೆ ಇಲ್ಲದ ಕೋಟಿ ಕೋಟಿ ಹಣ ಪತ್ತೆ ಪ್ರಕರಣದಲ್ಲಿ ಸೋಮವಾರ ರಾತ್ರಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ ತುಮಕೂರಿನ ಕ್ಯಾತ್ಸಂದ್ರ ಟೋಲ್ ಬಳಿ ಬಂಧನ ಮಾಡಿದ್ದರು. ಇಂದು ಬಂಧನ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಮಧ್ಯಾಹ್ನದ ವೇಳೆ ಶಾಸಕರನ್ನು ಕೋರ್ಟ್ ಗೆ ಹಾಜರುಪಡಿಸಿದ್ದರು.
ಶಾಸಕ ಮಾಡಾಳ್ ಅವರನ್ನು 10 ದಿನಗಳ ಕಾಲ ಕಸ್ಟಡಿಗೆ ನೀಡಬೇಕು ಎಂದು ಲೋಕಾಯುಕ್ತ ಪರ ವಕೀಲರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶರಿಗೆ ಮನವಿ ಮಾಡಿದರು. ಇದಕ್ಕೆ ಮಾಡಾಳ್ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಈಗಾಗಲೇ ಸಾಕಷ್ಟು ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ. ಜತೆಗೆ ಮಾಡಾಳ್ ವಿರೂಪಾಕ್ಷಪ್ಪ ಅನಾರೋಗ್ಯ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಜಾಮೀನು ನೀಡಬೇಕು ಎಂದು ಅರ್ಜಿ ಸಲ್ಲಿಸಿದರು. ಅಂತಿಮವಾಗಿ ನ್ಯಾಯಾಧೀಶರು ಐದು ದಿನಗಳ ಕಾಲ ಲೋಕಾಯುಕ್ತ ವಶಕ್ಕೆ ಒಪ್ಪಿಸಿ ಆದೇಶ ನೀಡಿದರು.