ಬೆಂಗಳೂರು, ಮಾ 28 (DaijiworldNews/MS):ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಇಂದು ಘೋಷಿಸಿದ್ದು, ಇದರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ 20 ತಿಂಗಳ ಆಡಳಿತ ದರ್ಬಾರು ಬಹುತೇಕ ಅಂತಿಮ ಹಂತಕ್ಕೆ ಬಂದಿದೆ.
ಯಡಿಯೂರಪ್ಪ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ ಮಾರನೇ ದಿನವೇ ಅಂದರೆ ಬೊಮ್ಮಾಯಿ 2021ರ ಜುಲೈ 28ರಂದು ರಾಜ್ಯದ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು. ಸಿಎಂ ಆಗಿ ನಿನ್ನೆಗೆ ಅವರು 20 ತಿಂಗಳ ಅಧಿಕಾರಾವಧಿ ಪೂರ್ಣಗೊಳಿಸಿದ್ದು, ಇಂದಿನಿಂದ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದೆ.
ಇನ್ನು ರಾಜ್ಯದಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಮೇ 10ರಂದು ವಿಧಾನಸಭಾ ಚುನಾವಣೆ ನಡೆಯಲ್ಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗವು ತಿಳಿಸಿದೆ.ರಾಜ್ಯದಲ್ಲಿ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಏಪ್ರಿಲ್ 13ರಂದು ಅಧಿಸೂಚನೆ, ಏಪ್ರಿಲ್ 20ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್ 21ಕ್ಕೆ ನಾಮ ಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 24 ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನವಾಗಿರುತ್ತದೆ.