ಬೆಂಗಳೂರು, ಮಾ 30 (DaijiworldNews/DB): ಸೂರ್ಯ, ಚಂದ್ರ ಇರುವುದು ಎಷ್ಟು ಸತ್ಯವೋ ಬಿಜೆಪಿ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರುವುದೂ ಅಷ್ಟೇ ಸತ್ಯ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ರಾಜ್ಯದಲ್ಲಿ 70ಕ್ಕಿಂತ ಅಧಿಕ ಸ್ಥಾನ ಗೆಲ್ಲುವುದು ಅಸಾಧ್ಯದ ಮಾತು. ಅವರಿಗೆ ಈಗ ಆತಂಕ ಶುರುವಾಗಿದೆ. ಸೂರ್ಯ, ಚಂದ್ರ ಇರುವುದು ಎಷ್ಟು ಸತ್ಯವೋ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೇರುವುದು ಸತ್ಯ ಎಂದರು.
ಚುನಾವಣೆಗೆ ಸ್ಪರ್ಧಿಸಲಿರುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರ ಬಿಡುಗಡೆಯಾಗಲಿದೆ. ಪಟ್ಟಿಯನ್ನು ಹೈಕಮಾಂಡ್ ಬಿಡುಗಡೆ ಮಾಡಲಿದೆ ಎಂದು ತಿಳಿಸಿದರು.
ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ. ನಾಲ್ಕು ತಂಡಗಳ ಮೂಲಕ ಈಗಾಗಲೇ ವಿಜಯಯಾತ್ರೆ ಪೂರ್ಣಗೊಂಡಿದೆ. ಮೋದಿ ಮತ್ತು ಬಿಜೆಪಿ ಪರ ಜನರಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದವರು ಪ್ರತಿಪಾದಿಸಿದರು.