ನವದೆಹಲಿ, ಮೇ 12 (DaijiworldNews/MS): ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಶುಕ್ರವಾರ ಜೂನ್ 2 ರವರೆಗೆ ವಿಸ್ತರಿಸಿದೆ.
ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದೀಗ ನ್ಯಾಯಾಧೀಶ ಎಂಕೆ ನಾಗ್ಪಾಲ್ ಸಿಸೋಡಿಯಾ ಅವರ ಕಸ್ಟಡಿಯನ್ನು ವಿಸ್ತರಿಸಿದರು.
ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳು ನಡೆದಿದ್ದು, ಇದಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯಲ್ಲಿ ಸಿಸೋಡಿಯಾ ಅವರನ್ನು ಸಿಬಿಐ ಮತ್ತು ಇಡಿ ಬಂಧನಕ್ಕೊಳಪಡಿಸಿದೆ.
ಮಾರ್ಚ್ 31 ರಂದು ನ್ಯಾಯಾಲಯವು ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ದೆಹಲಿ ಅಬಕಾರಿ ನೀತಿ ಪ್ರಕರಣದಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುತ್ತಿದ್ದು, ಸಿಸೋಡಿಯಾ ಅವರನ್ನು ವಿಚಾರಣೆ ನಡೆಸುತ್ತಿದೆ.