ಬೆಂಗಳೂರು,ಮಾ28(AZM):ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದ್ದು, ಚುನಾವಣೆಯ ವೇಳೆ ಆದಾಯ ತೆರಿಗೆ ಇಲಾಖೆಯ ದುರುಪಯೋಗ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗುರುವಾರದಂದು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಅವರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬೆಂಗಳೂರು ಉತ್ತರ ಕ್ಷೇತ್ರದ ಪ್ರಚಾರಪೂರ್ವ ಜೆಡಿಎಸ್-ಕಾಂಗ್ರೆಸ್ ಪಕ್ಷಗಳ ಜಂಟಿ ಸಭೆಯ ಬಳಿಕ ಈ ಕುರಿತು ಮಾತನಾಡಿದರು. ಕೇವಲ ರಾಜಕೀಯ ದುರುದ್ದೇಶಕ್ಕಾಗಿಯೇ ಕಾಂಗ್ರೆಸ್-ಜೆಡಿಎಸ್ ಮೇಲೆ ದಾಳಿ ಮಾಡಿ ಬ್ಲ್ಯಾಕ್ಮೇಲ್ ಮಾಡಿದರೆ ನಾವು ಹೆದರುವುದಿಲ್ಲ. ಒಬ್ಬ ಬಿಜೆಪಿಯವರ ಮೇಲೆ ದಾಳಿ ನಡೆದಿಲ್ಲ ಎಂದು ಹೇಳಿದರು.
ಆಪರೇಷನ್ ಕಮಲಕ್ಕಾಗಿ ನೂರಾರು ಕೋಟಿ ಖರ್ಚು ಮಾಡಿದ್ದರು. ಈ ಬಗ್ಗೆ ನಾವು ದೂರುಕೊಟ್ಟರೂ ಕ್ರಮಕೈಗೊಳ್ಳಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಾತ್ಯತೀತ ಶಕ್ತಿ ಒಂದಾಗಿದ್ದೇವೆ ಎಂದು ತೋರಿಸಲು ಈ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಐಟಿ ಅಧಿಕಾರಿಗಳು ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
ನಮ್ಮ ನಾಯಕರ ತೇಜೋವಧೆ ಹಾಗೂ ಅಪಪ್ರಚಾರ ನಡೆಯುತ್ತಿದೆ. ಅದನ್ನು ಸಮರ್ಥವಾಗಿ ಎದುರಿಸಬೇಕು.ಹಾಗೂ ಸುಳ್ಳುಗಾರ, ಮೋಸಗಾರ ಮೋದಿಯನ್ನು ಮನೆಗೆ ಕಳುಹಿಸಬೇಕು ಎಂದು ಹೇಳಿದರು.