ಬೆಂಗಳೂರು, ಮೇ 20 (DaijiworldNews/MS): ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ , 8 ಮಂದಿ ಶಾಸಕರು ಸಚಿವರಾಗಿ ಇಂದು ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಸಮಾರಂಭಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸುತ್ತಿದ್ದು, ಕಂಠೀರವ ಕ್ರೀಡಾಂಗಣದ ಪ್ರವೇಶ ದ್ವಾರದ ಬೆಳಗ್ಗೆಯೇ ನೂಕುನುಗ್ಗಲು ಉಂಟಾಗಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ದಾರೆ.
ಸಿದ್ದರಾಮಯ್ಯ ಪ್ರಮಾಣವಚನ ಕಾರ್ಯಕ್ರಮಕ್ಕೆ ಆಗಮಿಸುವ ಜನರು ಕಂಠೀರವ ಕ್ರೀಡಾಂಗಣದ ಒಳಗೆ ಹೋಗಲು ನೂಕುನುಗ್ಗಲು ಶುರುವಾಗಿದೆ. ಈ ವೇಳೆ ಪೊಲೀಸರು ಲಘುಲಾಠಿ ಚಾರ್ಜ್ ಮಾಡಿದ್ದು, ತ ಳ್ಳಾಟ ನೂಕಾಟದಲ್ಲಿ ಮೂವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ನೂಕುನುಗ್ಗಲಾದ ಹಿನ್ನೆಲೆ ಸ್ಥಳಕ್ಕೆ ಅಪರಾಧ ವಿಭಾಗ ಜಂಟಿ ಪೊಲೀಸ್ ಆಯುಕ್ತ ಶರಣಪ್ಪ ಆಗಮಿಸಿ ಘಟನೆ ಬಗ್ಗೆ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಮತ್ತು ಸಾರ್ವಜನಿಕ ಪ್ರವೇಶ ದ್ವಾರ ಬಳಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ