ಬೆಂಗಳೂರು, ಮೇ 29 (DaijiworldNews/HR): 2023-24ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ ಇಂದಿನಿಂದ ಶಾಲೆಗಳು ತೆರೆಯಲಿದ್ದು, ಮೇ 31ರಿಂದ ರಾಜ್ಯಾದ್ಯಂತ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಪುನಾರಂಭಗೊಳ್ಳಲಿವೆ.
ಮೇ 29 ಮತ್ತು 30ರಂದು ಶಾಲೆಗಳನ್ನು ಸಂಪೂರ್ಣ ಸ್ವತ್ಛಗೊಳಿಸಿ, ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ ಪ್ರಾರಂಭೋತ್ಸವಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಶಿಕ್ಷಣ ಇಲಾಖೆಯಿಂದ ಸೂಚಿಸಲಾಗಿದೆ.
ಇನ್ನು ಮಕ್ಕಳು ತರಗತಿಯಲ್ಲಿ ಕೂತು ಪಾಠ ಕೇಳಲು ಆರೋಗ್ಯಕರ ರೀತಿಯಲ್ಲಿ ಶಾಲೆಯನ್ನು ಸಜ್ಜುಗೊಳಿಸಬೇಕು. ಶಾಲಾ ಕೊಠಡಿ, ಶೌಚಾಲಯ, ಕಾಂಪೌಂಡ್ ಸೇರಿ ಶಾಲೆಯ ಯಾವುದೇ ಭಾಗ ಮಳೆ ಮತ್ತಿತರ ಕಾರಣದಿಂದ ಹಾನಿಯಾಗಿದ್ದರೆ ಅವುಗಳ ದುರಸ್ತಿಗೆ ಕ್ರಮ ವಹಿಸುವ ಮೂಲಕ ಸುರಕ್ಷತೆಗೆ ಆದ್ಯತೆ ನೀಡಬೇಕೆಂದು ಇಲಾಖೆ ಎಲ್ಲ ಮುಖ್ಯೋಪಾಧ್ಯಾಯರಿಗೆ ಸೂಚಿಸಲಾಗಿದೆ.
ಮೇ 31ರ ಶಾಲೆ ಆರಂಭದ ದಿನ ತಳಿರು ತೋರಣಗಳಿಂದ ಶಾಲೆಯನ್ನು ಸಿಂಗರಿಸಿ ಮಕ್ಕಳಿಗೆ ಗುಲಾಬಿ ಹೂ, ಚಾಕಲೇಟ್ ಅಥವಾ ಇನ್ಯಾವುದೇ ಸಿಹಿ ನೀಡಿ ಬರಮಾಡಿಕೊಳ್ಳಬೇಕು. ಅಂದು ಬಿಸಿಯೂಟದಲ್ಲಿ ಒಂದು ಸಿಹಿ ತಿನಿಸು ತಯಾರಿಸಿ ಮಕ್ಕಳಿಗೆ ಬಡಿಸಬೇಕೆಂದು ಸೂಚಿಸಲಾಗಿದೆ.