ಬೆಂಗಳೂರು, ಜೂ 16 (DaijiworldNews/MS): ಬಡವರ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿರುವುದನ್ನು ವಿರೋಧಿಸಿ ಮೋದಿ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಜೂ.20ರಂದು ರಾಜ್ಯದೆಲ್ಲೆಡೆ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಡಿಸಿಎಂ ಡಿಕೆಶಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷದಿಂದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಆ ದಿನ ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಯಲಿದ್ದು, ಪಕ್ಷದ ನಾಯಕರು, ಶಾಸಕರು ಭಾಗವಹಿಸಲಿದ್ದಾರೆ. ಆ ಮೂಲಕ ಕೇಂದ್ರ ಸರ್ಕಾರದ ಗಮನಸೆಳೆಯಲಾಗುವುದು ಎಂದು ಹೇಳಿದ್ದಾರೆ.
ಮೊದಲು ಅಕ್ಕಿ ಕೊಡುತ್ತೇವೆಂದಿದ್ದ ಎಫ್ ಸಿಐ ಬಳಿಕ ಸಾಧ್ಯವಿಲ್ಲವೆಂದು ಪತ್ರ ಬರೆದಿದೆ. ಕೇಂದ್ರ ಸರ್ಕಾರದ ದ್ವೇಷದ ರಾಜಕಾರಣಕ್ಕೆ ಇದು ಉದಾಹರಣೆಯಾಗಿದೆ. ಬಡವರ ಹೊಟ್ಟೆ ಮೇಲೆ ಹೊಡೆದಿದ ಬಿಜೆಪಿ ಬಡವರಿಗೆ ದ್ರೋಹ ಮಾಡುವ ಪಕ್ಷವಾಗಿದೆ. ಹೀಗಾಗಿ ಕೇಂದ್ರ ಸರ್ಕಾರ, ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.