ಬೆಂಗಳೂರು, ಜೂ 16 (DaijiworldNews/HR): ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಶಾಸಕ ಗಾಲಿ ಜನಾರ್ದನ ರೆಡ್ಡಿ, ಕ್ರೀಡಾ ಸಚಿವ ಬಿ. ನಾಗೇಂದ್ರ ಸೇರಿದಂತೆ 10 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ನೀಡಿದೆ.
ಜನಾರ್ದನ ರೆಡ್ಡಿ ಮತ್ತು ಅವರ ಪತ್ನಿ ಲಕ್ಷ್ಮೀ ಅರುಣಾ ಅವರ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣವೊಂದರಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ಇವರಿಗೆ ಸೇರಿದ ಕೆಲವು ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶಿಸಿದ ಬೆನ್ನಲ್ಲೇ ಇದೀಗ ಮತ್ತೊಂದು ಶಾಕ್ ನೀಡಿದೆ.
ಅಕ್ರಮ ಗಣಿಗಾರಿಕೆಯಿಂದ ರಾಜ್ಯಕ್ಕೆ ಸುಮಾರು 2.82 ಕೋಟಿ ರೂ. ಭಾರಿ ನಷ್ಟ ಉಂಟು ಮಾಡಿದ ಪ್ರಕರಣ ಸಂಬಂಧ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಾಸಕ ಗಾಲಿ ಜನಾರ್ದನ ರೆಡ್ಡಿ, ಕ್ರೀಡಾ ಸಚಿವ ಬಿ. ನಾಗೇಂದ್ರ ಸೇರಿದಂತೆ 10 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಿಸಿದೆ.
ಲೋಕಾಯುಕ್ತದ ತನಿಖಾಧಿಕಾರಿ ದಾಖಲಿಸಿದ್ದ ಖಾಸಗಿ ದೂರಿನ ಕುರಿತು ವಿಚಾರಣೆ ನಡೆಸಿದ ವಿಶೇಷ ಕೋರ್ಟ್ನ ನ್ಯಾಯಾಧೀಶರಾದ ಜೆ. ಪ್ರೀತ್ ಈ ಕುರಿತು ಆದೇಶ ಎಲ್ಲ ಪ್ರತಿವಾದಿಗಳಿಗೆ ಸಮನ್ಸ್ ಜಾರಿಗೊಳಿಸಿದ್ದಾರೆ.