ಮೈಸೂರು, ಜೂ 24 (DaijiworldNews/HR): ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಪ್ರತ್ಯೇಕ ಆ್ಯಪ್ ರೂಪಿಸಿದ್ದು, ಆ್ಯಪ್ ಮೂಲಕ ಅರ್ಜಿ ಸಲ್ಲಿಸಲು ಎಲ್ಲಾ ತಯಾರಿ ಮಾಡಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಜೂನ್ 27 ರಂದು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಅವರಿಗೆ ಆ್ಯಪ್ ತೋರಿಸಲಿದ್ದು, ಆ ಬಳಿಕ ಅರ್ಜಿ ಸಲ್ಲಿಕೆಗೆ ಆ್ಯಪ್ ಬಿಡುಗಡೆ ಮಾಡುತ್ತೇವೆ ಎಂದರು.
ಇನ್ನು ಆಗಸ್ಟ್ 17 ರ ನಂತರದಿಂದ ಫಲಾನುಭವಿಗಳಿಗೆ ಹಣ ಹಾಕುತ್ತೇವೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಕೆಗೆ ಯಾವ ಶುಲ್ಕವೂ ಇರುವುದಿಲ್ಲ. ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆ್ಯಪ್ ರಚಿಸಿದ್ದೇವೆ. ಒಂದು ರೂಪಾಯಿ ಹಣವನ್ನು ಅರ್ಜಿ ಸಲ್ಲಿಕೆಗೆ ಕೊಡಬೇಡಿ. ಅರ್ಜಿ ಸಲ್ಲಿಸಿ ಸ್ವೀಕೃತಿ ಪತ್ರ ಸಿಕ್ಕರೆ ಅಲ್ಲಿಗೆ ನೀವು ಫಲಾನುಭವಿ ಪಟ್ಟಿಗೆ ಸೇರುತ್ತೀರಿ. ಇದರಲ್ಲಿ ಯಾವುದೇ ಗೊಂದಲಗಳು ಬೇಡ ಎಂದು ತಿಳಿಸಿದ್ದಾರೆ.