ಸಾಂಗ್ಲಿ, ಜೂ 25 (DaijiworldNews/SM): ತಮ್ಮ 40 ವರ್ಷಗಳ ರಾಜಕೀಯ ಜೀವನದಲ್ಲಿ ಇಷ್ಟೊಂದು ‘ಸುಳ್ಳು’ ಹೇಳುವ ಪ್ರಧಾನಿಯನ್ನು ನೋಡಿಲ್ಲ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಾಂಗ್ಲಿಯಲ್ಲಿ ಮಹಾರಾಷ್ಟ್ರ ಕಾಂಗ್ರೆಸ್ ಘಟಕದಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಭ್ರಷ್ಟಾಚಾರದಲ್ಲಿ ತೊಡಗಿತ್ತು ಎಂದು ಆರೋಪಿಸಿದರು. ನರೇಂದ್ರ ಮೋದಿ ಸರ್ಕಾರವನ್ನು ಸೋಲಿಸಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸುವ ಜವಾಬ್ದಾರಿ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರ ಮೇಲಿದೆ ಎಂದರು.
2014 ರಲ್ಲಿ ಮೋದಿ ಜನರ ಬ್ಯಾಂಕ್ ಖಾತೆಗಳಿಗೆ 15 ಲಕ್ಷ ರೂ ಜಮೆ, ಎರಡು ಕೋಟಿ ಉದ್ಯೋಗ ಸೃಷ್ಟಿ ಮತ್ತು ಅಚ್ಚೇ ದಿನ್ (ಒಳ್ಳೆಯ ದಿನಗಳು) ತರುವ ಬಗ್ಗೆ ಮಾತನಾಡಿದ್ದರು. ಈ ರೀತಿಯ ಏನಾದರೂ ಆಗಿದೆಯೇ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಜೊತೆಗೆ ರಾಜ್ಯದ ಮೂಲೆ ಮೂಲೆಗಳಿಗೆ ಭೇಟಿ ನೀಡಿ ಹಿಂದಿನ ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜನರಿಗೆ ವಿವರಿಸಿದೇವು. ವಿವಿಧ ಕೆಲಸಗಳಿಗಾಗಿ 40 ಪರ್ಸೆಂಟ್ ಕಮಿಷನ್ ಬಗ್ಗೆ ಜನರಿಗೆ ಮನವರಿಕೆ ಮಾಡಲಾಯಿತು. ಬಿಜೆಪಿ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಬಿಜೆಪಿ ಎಂದು ಆರೋಪಿಸಿದರು.