ಬೆಂಗಳೂರು, ಜೂ 26 (DaijiworldNews/MS): ಪ್ರಜಾಪ್ರಭುತ್ವದ ದೇಗುಲ ವಿಧಾನಸಭೆಯಾಗಿದ್ದು ಇಲ್ಲಿ ಜನರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರಸ್ತಾಪಿಸಿ ಪರಿಹಾರ ಪಡೆದುಕೊಳ್ಳುವ ಮನಸ್ಥಿತಿ ಬೆಳೆಸಿಕೊಳ್ಳುವಂತೆ ಸಿಎಂ ಸಿದ್ದರಾಮಯ್ಯನವರು ನೂತನ ಶಾಸಕರಿಗೆ ಕರೆ ನೀಡಿದರು.
16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾದ ಶಾಸಕರುಗಳ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಯಾರು ಸಂವಿಧಾನವನ್ನು ಓದಿ ಅರ್ಥ ಮಾಡಿಕೊಳ್ಳುವುದಿಲ್ಲವೋ ಅವರು ಉತ್ತಮ ಶಾಸಕರಾಗಲು, ಸಂಸದರಾಗಲು ಸಾಧ್ಯವಿಲ್ಲ. ಆದ್ದರಿಂದ ಮೊದಲು ಸಂವಿಧಾನವನ್ನು ಓದಿ ಅದರ ಮೂಲಭೂತ ತತ್ವ ಮತ್ತು ಉದ್ದೇಶಗಳನ್ನು ಅರಿತುಕೊಳ್ಳಿ. ಸದನದ ನಿಯಮಾವಳಿಗಳನ್ನು ನಾವೇ ಮಾಡಿದ್ದೇವೆ. ಜನರ ಸಮಸ್ಯೆಗಳನ್ನು ನಿಯಮಬದ್ಧವಾಗಿ ಸದನದ ಮುಂದೆ ಮಂಡಿಸಬಹುದು ಎಂದರು.
ಮೊದಲ ಬಾರಿ ಹಣಕಾಸು ಸಚಿವನಾದಾಗ “ನೂರು ಕುರಿ ಎಣಿಸಲು ಬಾರದವನು ಬಜೆಟ್ ಹೇಗೆ ಮಾಡ್ತಾರೆ?” ಎಂದು ಪತ್ರಿಕೆಯೊಂದು ಟೀಕಿಸಿತ್ತು. ಟೀಕೆಯನ್ನು ನಾನು ಸವಾಲಾಗಿ ಸ್ವೀಕರಿಸಿ ನಿರಂತರ ವಿಷಯ ತಜ್ಞರ ಜತೆ ಚರ್ಚಿಸಿ ಬಜೆಟ್ ಮಂಡಿಸಿದೆ. ಮರುದಿನ ರಾಷ್ಟ್ರದ ಪ್ರತಿಷ್ಟಿತ ಪತ್ರಿಕೆ ನನ್ನ ಬಜೆಟ್ ಅನ್ನು ಅತ್ಯುತ್ತಮ ಎಂದು ಶ್ಲಾಘಿಸಿ ಸಂಪಾದಕೀಯ ಬರೆಯಿತು. ಹೀಗಾಗಿ ಜ್ಞಾನ ದಾಹ ಮತ್ತು ಅಧ್ಯಯನಶೀಲತೆಯನ್ನು ಬೆಳೆಸಿಕೊಳ್ಳಿ ಎಂದು ತಮ್ಮದೇ ಉದಾಹರಣೆ ಮೂಲಕ ಶಾಸಕರಿಗೆ ತಿಳಿ ಹೇಳಿದರು