National
ರಾಜ್ಯ ಬಜೆಟ್ - ಪರಿಶಿಷ್ಟ ಜಾತಿ, ಪಂಗಡಗಳ ಸಮುದಾಯದ ಸಮಗ್ರ ಅಭಿವೃದ್ಧಿಗೆ ಅನೇಕ ಯೋಜನೆ ಜಾರಿ
- Fri, Jul 07 2023 04:00:05 PM
-
ಬೆಂಗಳೂರು, ಜು 07 (DaijiworldNews/HR): ಆರ್ಥಿಕ ಸಚಿವರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಮಂಡಿಸಿದ ರಾಜ್ಯ ಬಜೆಟ್ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.
ರಾಜ್ಯ ಬಜೆಟ್ ನಲ್ಲಿ ಸಿದ್ದರಾಮಯ್ಯ ಅವರು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯಗಳ ಅಭಿವೃದ್ಧಿಗೆ ಏನೇನು ಹೊಸ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂಬುದರ ಸಂಪೂರ್ಣ ವಿವರ:
1. ಸಮಾಜದಲ್ಲಿ ಹಲವು ಪೀಳಿಗೆಗಳಿಂದ ತುಳಿತಕ್ಕೊಳಗಾದ, ಅವಕಾಶ ವಂಚಿತರಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಅಭ್ಯುದಯಕ್ಕೆ ನಮ್ಮ ಸರ್ಕಾರದ ಬದ್ಧತೆ ಪ್ರಶ್ನಾತೀತ. ಕರ್ನಾಟಕ ಅನುಸೂಚಿತ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆಗಳಿಗೆ ಈ ಹಿಂದೆ, ಅಂದರೆ, 2012-13ನೇ ಸಾಲಿನಲ್ಲಿ ಹಾಗೂ ಅದಕ್ಕೂ ಹಿಂದಿನ ಸಾಲುಗಳಲ್ಲಿ ವೈಜ್ಞಾನಿಕವಾಗಿ ಅನುದಾನ ಹಂಚಿಕೆಯಾಗುತ್ತಿರಲಿಲ್ಲ. ಈ ನ್ಯೂನತೆಯನ್ನು ಸರಿಪಡಿಸುವ ಸಲುವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳ ಜನಸಂಖ್ಯೆಯನ್ನಾಧರಿಸಿ, ಅವರ ಅಭಿವೃದ್ಧಿಗೆ ಅನುದಾನ ಹಂಚಿಕೆ ಮಾಡುವ ಹಾಗೂ ನಿರ್ದಿಷ್ಟ ಉದ್ದೇಶಗಳಿಗೇ ಅನುದಾನ ಬಳಕೆಯಾಗುವ ಕುರಿತು ಕರ್ನಾಟಕ ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆ ಅಧಿನಿಯಮ, 2013ನ್ನು (SCSP/TSP Act, 2013) ಜಾರಿಗೆ ತಂದ ಶ್ರೇಯ ನಮ್ಮ ಸರ್ಕಾರದ್ದಾಗಿದೆ.
2. ಈ ಯೋಜನೆಯ ಅನುದಾನ ಹಂಚಿಕೆಯಲ್ಲಿ ವ್ಯಾಪಕ ಬದಲಾವಣೆಯಾಗಿದ್ದು, 2013-14ರಲ್ಲಿ 8,988 ಕೋಟಿ ರೂ. ಇದ್ದ ಹಂಚಿಕೆ, 2014-15 ರಲ್ಲಿ 13,043 ಕೋಟಿ ರೂ. ಗಳಿಗೆ ಏರಿಕೆಯಾಗಿರುತ್ತದೆ. ನಂತರದ ಸಾಲುಗಳಲ್ಲಿ ಅಂದರೆ, 2015-16 ರಿಂದ 2022-23ರ ವರೆಗಿನ ಸಾಲುಗಳಲ್ಲಿ ಈ ಯೋಜನೆಯಡಿ ಆಯವ್ಯಯದ ಶೇ. 24.1ರಷ್ಟು ಅನುದಾನ ಈ ಸಮುದಾಯಕ್ಕೆ ಕಡ್ಡಾಯವಾಗಿ ದೊರಕಿಸಿಕೊಟ್ಟಂತಾಗಿದೆ. ಆದಾಗ್ಯೂ, ಹಿಂದಿನ ಸರ್ಕಾರದ ಅವಧಿಯಲ್ಲಿ ಒಟ್ಟಾರೆ ಅನುದಾನ ಹಂಚಿಕೆಯು ನಿರಾಶಾದಾಯಕವಾಗಿತ್ತು. 2023ರ ಫೆಬ್ರವರಿ ತಿಂಗಳಿನಲ್ಲಿ ಹಿಂದಿನ ಸರ್ಕಾರ ಮಂಡಿಸಿದ್ದ ಆಯವ್ಯಯದಲ್ಲಿ SCSP/TSP ಯೋಜನೆಗೆ ಹಂಚಿಕೆ ಮಾಡಿದ್ದ 30,21೫ ಕೋಟಿ ರೂ. ಅನುದಾನವನ್ನು, ನಾನು ಈ ಆಯವ್ಯಯದಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಯಡಿ 24,333 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ 9,960 ಕೋಟಿ ರೂ. ಸೇರಿದಂತೆ ಒಟ್ಟಾರೆ 34,294 ಕೋಟಿ ರೂ.ಗಳಿಗೆ ಹೆಚ್ಚಿಸಿ, 4,079 ಕೋಟಿ ರೂ.ಗಳ ಹೆಚ್ಚುವರಿ ಅನುದಾನವನ್ನು ಒದಗಿಸಿರುತ್ತೇನೆ. ಇದು ಈ ಸಮುದಾಯಗಳ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ನಮ್ಮ ಸರ್ಕಾರವು ನೀಡುವ ಆದ್ಯತೆಗೆ ಸ್ಪಷ್ಟ ನಿದರ್ಶನವಾಗಿದೆ.
3. SCSP/TSP ಅಧಿನಿಯಮ, 2013ರಡಿ ಹಂಚಿಕೆಯಾಗುವ ಅನುದಾನ ಆ ಸಮುದಾಯಗಳ ಒಳಿತಿಗೇ ಬಳಕೆಯಾಗಬೇಕೆನ್ನುವುದು ನಮ್ಮ ಸರ್ಕಾರದ ಆಶಯವಾಗಿದೆ.
ಈ ನಿಟ್ಟಿನಲ್ಲಿ ದಲಿತ ಸಂಘಟನೆಗಳು ಮತ್ತು ಚಿಂತಕರ ಬಹುದಿನಗಳ ಒತ್ತಾಯದನ್ವಯ ಕಾಯ್ದೆಯ ಸೆಕ್ಷನ್ ೭(ಡಿ) ಅನ್ನು ಕೈಬಿಡಲಾಗುವುದು.
4. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಹತ್ತು ಕ್ರೈಸ್ ವಸತಿ ಶಾಲೆಗಳಲ್ಲಿ ಕ್ರೀಡೆಗಳನ್ನು ಪ್ರೋತ್ಸಾಹಿಸಲು ಹಾಗೂ ಉತ್ತಮ ಗುಣಮಟ್ಟದ ಕ್ರೀಡಾ ಸೌಲಭ್ಯವನ್ನು ಒದಗಿಸಲು ತಲಾ ಎರಡು ಕೋಟಿ ರೂ.ಗಳಂತೆ ಒಟ್ಟು 20 ಕೋಟಿ ರೂ. ನೀಡಲಾಗುವುದು.
5. ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ವಿಶ್ವದಲ್ಲಿ 250 ರೊಳಗೆ University Ranking ಹೊಂದಿರುವ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಉನ್ನತ ಶಿಕ್ಷಣವನ್ನು ವಿದೇಶದಲ್ಲಿ ಕೈಗೊಳ್ಳುವ ಸಲುವಾಗಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯಕ್ಕನುಗುಣವಾಗಿ ವ್ಯಾಸಂಗದ ಸಂಪೂರ್ಣ ವೆಚ್ಚವನ್ನು ಸರ್ಕಾರದ ವತಿಯಿಂದ ಭರಿಸಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಈ ಯೋಜನೆಗೆ ಇನ್ನೂ ಹೆಚ್ಚಿನ ಪ್ರಾತಿನಿಧ್ಯ ನೀಡಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು 36 ಕೋಟಿ ರೂ. ಅನುದಾನ ಒದಗಿಸಲಾಗಿದೆ.
6. ISEC ಸಂಸ್ಥೆಯಲ್ಲಿ Ph.D. ಮಾಡುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಡಾ. ಬಿ.ಆರ್. ಅಂಬೇಡ್ಕರ್ ಫೆಲೋಶಿಪ್ ನೀಡಲು ಎರಡು ಕೋಟಿ ರೂ. Corpus Fund ನೀಡಲಾಗುವುದು.
7. ʻಸ್ವಾವಲಂಬಿ ಸಾರಥಿʼ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಜನರು ನಾಲ್ಕು ಚಕ್ರಗಳ ವಾಹನ ಖರೀದಿಗೆ ಪಡೆಯುವ ಸಾಲದ ಶೇ.75 ರಷ್ಟು, ಗರಿಷ್ಠ ನಾಲ್ಕು ಲಕ್ಷ ರೂ. ಸಹಾಯಧನ ನೀಡುವ ಮೂಲಕ ಸ್ವಯಂ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹಿಸಲಾಗುವುದು.
8. ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಿಂದ ಸಾಲ ಪಡೆಯುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ ಎರಡು ಕೋಟಿ ರೂ.ವರೆಗೆ ಸರ್ಕಾರದಿಂದ ಸಮಾನಾಂತರ ಖಾತ್ರಿ ನೀಡುವ ಯೋಜನೆ ಜಾರಿಯಲ್ಲಿದ್ದು, ಸಮಾನಾಂತರ ಖಾತ್ರಿಯನ್ನು ರಾಷ್ಟ್ರೀಕೃತ ಬ್ಯಾಂಕ್ ಗಳಿಂದ ಪಡೆಯುವ ಸಾಲಕ್ಕೂ ವಿಸ್ತರಿಸಲಾಗುವುದು.
9. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಜನರಿಗೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸಹಯೋಗದೊಂದಿಗೆ ಉದ್ಯಮಶೀಲತೆ ಅಭಿವೃದ್ಧಿ ಕಾರ್ಯಕ್ರಮದಡಿ (ಇಡಿಪಿ) ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು.
10. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಒಂದು ಲಕ್ಷ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುವುದು.
11. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿಗಳಿಗೆ ಆದಾಯ ಉತ್ಪನ್ನ ಚಟುವಟಿಕೆಗಳನ್ನು ಕೈಗೊಳ್ಳಲು ವಾಣಿಜ್ಯ ಬ್ಯಾಂಕ್ಗಳಿಂದ ಪಡೆಯುವ ಸಾಲಕ್ಕೆ ಗರಿಷ್ಠ ಶೇ.20ರಷ್ಟು ಅಥವಾ ಒಂದು ಲಕ್ಷ ರೂ.ಗಳು ಮೀರದಂತೆ ಸಾಲ ಸಹಾಯಧನ ನೀಡಲಾಗುವುದು.
12. ಚರ್ಮ ಆಧಾರಿತ ಸಾಂಪ್ರದಾಯಿಕ ಕುಶಲಕರ್ಮಿಗಳ ಕುಟುಂಬಗಳ 100 ಯುವಜನರಿಗೆ ಚರ್ಮ ಉದ್ಯಮದಲ್ಲಿನ ಹೊಸ ತಂತ್ರಜ್ಞಾನಗಳು, ವಿನ್ಯಾಸಗಳು ಹಾಗೂ ಮಾರುಕಟ್ಟೆಯ ಬೇಡಿಕೆಗಳಿಗೆ ಪರಿಚಯಿಸಲು ಚರ್ಮ ಆಧಾರಿತ ಕೈಗಾರಿಕೆಗಳಲ್ಲಿ ಮುಂಚೂಣಿಯಲ್ಲಿರುವ ರಾಜ್ಯಗಳಾದ ದೆಹಲಿ, ತಮಿಳುನಾಡು, ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ತರಬೇತಿ ಪಡೆಯಲು ಕಳುಹಿಸಲಾಗುವುದು.
13. ಜಿಲ್ಲಾ ಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಿರಿಯ ನಾಗರಿಕರ ಆರೈಕೆ ಮತ್ತು ನೆರವಿಗಾಗಿ ವೃದ್ಧಾಶ್ರಮಗಳನ್ನು ಸಮಾಜ ಕಲ್ಯಾಣ ಇಲಾಖೆಯ ಕೇಂದ್ರ ಪರಿಹಾರ ಸಮಿತಿ (CRC) ಮತ್ತು NGO ಗಳ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.
14. ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯವನ್ನು ದೌರ್ಜನ್ಯ ತಡೆ ಅಧಿನಿಯಮದಡಿ ರಕ್ಷಣಾ ಕೋಶವನ್ನಾಗಿ ಘೋಷಿಸಲಾಗಿದೆ. ಈ ಕೋಶವು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಅಗತ್ಯ ಕ್ರಮವಹಿಸಲಾಗುವುದು.
15. ಪರಿಶಿಷ್ಟ ಪಂಗಡಗಳ ಜನಾಂಗದಲ್ಲಿ ಸೋಲಿಗ ಸಮುದಾಯ ಒಳಗೊಂಡಂತೆ ಜೇನುಕುರುಬ, ಕಾಡುಕುರುಬ, ಕೊರಗ, ಇರುಳಿಗ, ಬೆಟ್ಟಕುರುಬ ಇತ್ಯಾದಿ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರ ಸಮಗ್ರ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿನಲ್ಲಿ
50 ಕೋಟಿ ರೂ.ಗಳನ್ನು ಒದಗಿಸಲಾಗುವುದು.16. ರಾಜ್ಯದ 8 ಜಿಲ್ಲೆಗಳಲ್ಲಿ ವಾಸಿಸುತ್ತಿರುವ 11 ಬುಡಕಟ್ಟು ಪಂಗಡಗಳಾದ ಕೊರಗ, ಜೇನುಕುರುಬ, ಸೋಲಿಗ, ಎರವ, ಕಾಡುಕುರುಬ, ಮಲೆಕುಡಿಯ, ಸಿದ್ಧಿ, ಹಸಲರು, ಗೌಡಲು, ಗೊಂಡ ಮತ್ತು ಬೆಟ್ಟಕುರುಬ ಜನಾಂಗದ ಕುಟುಂಬಗಳಿಗೆ ಪೌಷ್ಟಿಕ ಆಹಾರ ಯೋಜನೆಯನ್ನು ವಾರ್ಷಿಕ ಆರು ತಿಂಗಳುಗಳಿಗೆ ನೀಡಲಾಗುತ್ತಿದ್ದು, ಇದನ್ನು 12 ತಿಂಗಳಿಗೆ ವಿಸ್ತರಿಸಲಾಗುವುದು. ಇದಕ್ಕೆ ವಾರ್ಷಿಕವಾಗಿ 50 ಕೋಟಿ ರೂ.ಗಳನ್ನು ಒದಗಿಸಲಾಗುವುದು.
17. ಅರಣ್ಯ ಉತ್ಪನ್ನಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆಗಾಗಿ ಬುಡಕಟ್ಟು ಪ್ರದೇಶಗಳಲ್ಲಿ 100 ಅರಣ್ಯ ಉತ್ಪನ್ನ ಘಟಕಗಳನ್ನು TRIFED ಸಮನ್ವಯದಲ್ಲಿ ಸ್ಥಾಪಿಸಲಾಗುವುದು.