ಬೆಂಗಳೂರು, ಜು 11 (DaijiworldNews/SM): ಜೈನ ಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಪ್ರಕರಣಕ್ಕೆ ವಿವಿಧಾರ್ಥ ಕಲ್ಪಿಸಲಾಗುತ್ತಿದೆ. ಒಂದು ಕಡೆ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಬಿಜೆಪಿ ಆಗ್ರಹಿಸುತ್ತಿದ್ದು ಇತ್ತ ಸಿಬಿಐಗೆ ವಹಿಸುವ ಅವಶ್ಯಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸದನದಲ್ಲಿ ಉತ್ತರಿಸಿದ್ದಾರೆ.
ಪ್ರಕರಣದ ತನಿಖೆ ನಡೆಸಲು ನಮ್ಮ ಪೊಲೀಸರು ಸಮರ್ಥವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ವಿಧಾನಸಭೆ ತಿಳಿಸಿದ್ದಾರೆ. ಇಂದು ವಿಧಾನಸಭೆಯಲ್ಲಿ ಪ್ರತಿಪಕ್ಷ ಬಿಜೆಪಿ ನಾಯಕರು ಜೈನಮುನಿ ಹತ್ಯೆ ಪ್ರಕರಣವನ್ನ ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಜೈನ ಮುನಿ ಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಲಿದೆ. ಜೈನ ಮುನಿಯ ಹತ್ಯೆ ಅಮಾನುಷ ಕಗ್ಗೊಲೆಯಾಗಿದೆ. ಇಬ್ಬರು ಆರೋಪಿಗಳ ಹೆಸರು ಎಫ್ ಐ ಆರ್ ನಲ್ಲಿ ಇದೆ. ಇಬ್ಬರು ಆರೋಪಿಗಳ ಬಂದನವೂ ಆಗಿದೆ. ಮೃತದೇಹವನ್ನು ಪತ್ತೆ ಹಚ್ಚಲಾಗಿದೆ. ಪೊಲೀಸರು ತಪ್ಪು ಎಲ್ಲಿದೆ? ಎಂದು ಪ್ರಶ್ನಿಸಿದರು. ಜೈನ ಮುನಿಗಳ ಹತ್ಯೆ ಪ್ರಕರಣದಲ್ಲಿ ಪೊಲೀಸರು ಸಮರ್ಥವಾಗಿ ಕೆಲಸ ಮಾಡಿದ್ದಾರೆ. ಇದರ ಹಿಂದೆ ಎಷ್ಟೇ ಪ್ರಭಾವಿಗಳು ಇದ್ದರೂ ಶಿಕ್ಷೆ ಕೊಡಿಸುವ ಕೆಲಸ ಮಾಡುತ್ತೇವೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಆಗಲಿದೆ ಎಂದು ಸಿಎಂ ಭರವಸೆ ನೀಡಿದರು.