ಬೆಂಗಳೂರು, ಜು 15 (DaijiworldNews/HR): ಜುಲೈ 19 ರಿಂದ ಗೃಹ ಲಕ್ಷ್ಮೀ ಯೋಜನೆಗೆ ಫಲಾನುಭವಿಗಳ ನೋಂದಣಿ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಅವರು, ಗೃಹ ಲಕ್ಷ್ಮೀ ಯೋಜನೆಗೆ ಫಲಾನುಭವಿಗಳ ನೋಂದಣಿ ಜುಲೈ 19 ರಿಂದ ಆರಂಭವಾಗಲಿದ್ದು, ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆ ಯೋಜನೆಯ ಫಲಾನುಭವಿಯಾಗಿರುತ್ತಾರೆ ಎಂದರು.
ಇನ್ನು ಫಲಾನುಭವಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್ಟಿ ಪಾವತಿದಾರರಾಗಿರಬಾರದು. ರೇಷನ್ ಕಾರ್ಡ್ನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಮತ್ತು ನೋಂದಣಿ ಸ್ಥಳದ ವಿವರ ಎಸ್ಎಂಎಸ್ ಮೂಲಕ ರವಾನೆ ಮಾಡಲಾಗುವುದು. ಇನ್ನು ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ವನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ನೋಂದಣಿಗೆ ಅವಕಾಶ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಈ ಯೋಜನೆಗೆ ಚಾಲನೆ ನೀಡಲು ರಾಷ್ಟ್ರೀಯ ನಾಯಕರನ್ನು ಆಹ್ವಾನ ಮಾಡಲಾಗಿದ್ದು, ಈ ಸಂಬಂಧ ರಾಷ್ಟ್ರೀಯ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ ಎಂದು ತಿಳಿಸಿದರು.