ಮಂಗಳೂರು, ಜು 29 (DaijiworldNews/AK): 2022-23ನೇ ಸಾಲಿನ ಮತ್ತು ಅದಕ್ಕೂ ಹಿಂದಿನ ಶೈಕ್ಷಣಿಕ ವರ್ಷಗಳಲ್ಲಿ ವ್ಯಾಸಂಗ ಮಾಡಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತೀರ್ಣರಾದ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ಬಾರಿ ವಿಶೇಷ ಪೂರಕ ಪರೀಕ್ಷೆ ಆಗಸ್ಟ್ 21ರಿಂದ ಸೆಪ್ಟಂಬರ್ 2ರ ವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಆಯೋಜಿಸಿದೆ.
ಅನುತ್ತೀರ್ಣರಾದ ವಿದ್ಯಾರ್ಥಿಗಳು ತಮ್ಮ ಕಾಲೇಜು ಪ್ರಾಂಶುಪಾಲರನ್ನು ಸಂಪರ್ಕಿಸಿ ಆ.10ರೊಳಗೆ ಹೆಸರು ನೋಂದಣಿ ಮಾಡಿಕೊಳ್ಳುವಂತೆ ಕೋರಲಾಗಿದೆ. ಇದೇ ಪ್ರಥಮ ಬಾರಿಗೆ ವಿಶೇಷ ಪೂರಕ ಪರೀಕ್ಷೆ ನಡೆಸುತ್ತಿರುವುದರಿಂದ ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳುವಂತೆ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಉಪನಿರ್ದೇಶಕ ಜಯಣ್ಣ ಸಿ.ಡಿ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನು ಈ ವಿಶೇಷ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷೆ ಫಲಿತಾಂಶವನ್ನು ತಿರಸ್ಕರಿಸುವಂತಿಲ್ಲ. ಪರೀಕ್ಷೆಗೆ ಸಂಬಂಧಿಸಿದ ಸುತ್ತೋಲೆ ಹಾಗೂ ವೇಳಾಪಟ್ಟಿಯನ್ನು ಜಾಲತಾಣ https://kseab.karnataka.gov.in ನಲ್ಲಿ ವೀಕ್ಷಿಸಬಹುದಾಗಿದೆ.