ನವದೆಹಲಿ, ಆ 3 (DaijiworldNews/SM): ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ಅಪಘಾತಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ ಕುರಿತು ಮಾತುಕತೆ ನಡೆಸಿದ್ದಾರೆ.
ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಅಪಘಾತ ತಪ್ಪಿಸಲು ಪ್ರವೇಶ ಹಾಗೂ ನಿರ್ಗಮನ ಬೈಪಾಸ್ ಗಳನ್ನು ಒದಗಿಸಬೇಕು, ಜೊತೆಗೆ ರಸ್ತೆ ಬದಿ ಸೌಕರ್ಯಗಳನ್ನು ಕಲ್ಪಿಸುವಂತೆ ಮನವಿ ಮಾಡಿದ್ದು, ಹೆದ್ದಾರಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ತಜ್ಞರ ತಂಡವೊಂದನ್ನು ಹೆದ್ದಾರಿ ವೀಕ್ಷಣೆಗೆ ಕಳುಹಿಸಿ ಲೋಪ ದೋಷ ಸರಿಪಡಿಸುವುದಾಗಿ ಗಡ್ಕರಿ ಅವರು ತಿಳಿಸಿದರು ಎನ್ನಲಾಗಿದೆ.
ಇದೇ ವರ್ಷ ಉದ್ಘಾಟನೆಯಾದ 117 ಕಿಲೋ ಮೀಟರ್ ದೂರದ ಬೆಂಗಳೂರು - ಮೈಸೂರು ಎಕ್ಸ್ಪ್ರೆಸ್ ವೇ ನಲ್ಲಿ ಸಂಭವಿಸಿದ ಅಪಘಾತದಲ್ಲಿ ನೂರಾರು ಸಾವುಗಳು ಆಗಿವೆ. 350ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರು - ಮೈಸೂರು ಹೆದ್ದಾರಿಯನ್ನು ಪರಿಶೀಲನೆ ನಡೆಸಿದ್ದರು. ರಸ್ತೆ ಸುರಕ್ಷತೆ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳ ಜೊತೆಗೆ ಸಭೆಯನ್ನು ನಡೆಸಿದ್ದರು.