ಕಲಬುರಗಿ,ಆ 05 (DaijiworldNews/AK): ಬಿಜೆಪಿಗೆ ತಾಕತ್ತಿದ್ದರೆ ಐದು ಗ್ಯಾರಂಟಿಗಳನ್ನು ಇಡೀ ದೇಶದ ಎಲ್ಲಾ ರಾಜ್ಯಗಳಲ್ಲಿ ಜಾರಿ ಮಾಡುವ ತೀರ್ಮಾನವನ್ನು ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದ್ದಾರೆ.
ಅವರು ಇಂದು ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿ, 5 ಗ್ಯಾರಂಟಿಗಳ ಅನುಷ್ಠಾನದ ಬಗ್ಗೆ ಯಾರಿಗೂ ಅಪನಂಬಿಕೆ ಬೇಡ. ವಿರೋಧ ಪಕ್ಷದವರು ಈ ಬಗ್ಗೆ ಗುಲ್ಲೆಬ್ಬಿಸುತ್ತಿದ್ದಾರೆ. ವಿರೋಧ ಪಕ್ಷದವರಲ್ಲದೇ ಈ ದೇಶದ ಪ್ರಧಾನಿಗಳು ಕೂಡ ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಿಲ್ಲ. ಈ ದೇಶವನ್ನು ದಿವಾಳಿ ಮಾಡಿರುವುದು ನರೇಂದ್ರ ಮೋದಿಯವರು ಎಂದು ಟೀಕಿಸಿದರು.
ಕರ್ನಾಟಕ ಹಿಂದೆ ಎಲ್ಲ ಭರವಸೆಗಳನ್ನು ಈಡೇರಿಸಿದಾಗ ಆರ್ಥಿಕವಾಗಿ ಸುಭದ್ರವಾಗಿತ್ತು. ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ ಸಂಪತ್ತನ್ನು ಲೂಟಿ ಮಾಡಿ, ಬೆಲೆ ಏರಿಕೆ ಮಾಡಿ, ನಿರುದ್ಯೋಗದ ಸಮಸ್ಯೆಯನ್ನು ಹೆಚ್ಚು ಮಾಡಿ, ರಾಜ್ಯದ ಬಡವರಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದ್ದು ಬಿಜೆಪಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.
ಕಲ್ಯಾಣ ಕರ್ನಾಟಕ ಎಂದು ಹೆಸರನ್ನು ಬದಲಾಯಿಸಿದ್ದೇ ಬಿಜೆಪಿ ಕೊಡುಗೆ. ಕೇಂದ್ರದ ನರೇಂದ್ರ ಮೋದಿ ಸರ್ಕಾರ, ಕರ್ನಾಟಕದಲ್ಲಿ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಸರ್ಕಾರ ರಾಜ್ಯವನ್ನು ಹಿಂದುಳಿಯುವಂತೆ ಮಾಡಿದ್ದು ನಾವು ನುಡಿದಂತೆ ನಡೆದಿದ್ದೇವೆ. ನಮ್ಮ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡುತ್ತಿರುವುದರಿಂದ ಹೊಟ್ಟೆಉರಿಯಿಂದ ಬಿಜೆಪಿಯವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನವರು ನಾವು ನೀಡುತ್ತಿದ್ದ 7 ಕೆಜಿ ಅಕ್ಕಿಯನ್ನು 4 ಕೆಜಿಗೆ ಇಳಿಸಿದ್ದರು ಎಂದು ಮುಖ್ಯಮಂತ್ರಿಗಳು ಆರೋಪಿಸಿದರು. ಬೆಲೆಏರಿಕೆಯ ಮೂಲಕ ಮೋದಿಯವರು ಜನರ ಬಳಿ ಇದ್ದ ದುಡ್ಡು ಕಿತ್ತುಕೊಳ್ಳತ್ತಾರೆ ಎಂದು ಮುಖ್ಯಮಂತ್ರಿಗಳು ವಿರೋಧಪಕ್ಷದವರ ಮಾತುಗಳಿಗೆ ಕಿವಿ ಕೊಡಬೇಕಾದ ಅಗತ್ಯವಿಲ್ಲ. ಕರ್ನಾಟಕ ಸರ್ಕಾರ ಎಂದಿಗೂ ಮಾತಿಗೆ ತಪ್ಪುವುದಿಲ್ಲ ಎಂದರು.