ನವದೆಹಲಿ, ಆ 07 (DaijiworldNews/AK):ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಸೂರತ್ ನ್ಯಾಯಾಲಯದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು, ಲೋಕಸಭೆ ಸದಸತ್ವದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಸಂಸತ್ತಿಗೆ ಮರಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ರಾಹುಲ್ ಗಾಂಧಿ ಅವರ ಅನರ್ಹತೆ ರದ್ದುಗೊಳಿಸುವ ಕುರಿತು ಇಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ನಿರ್ಧಾರದತ್ತ ಎಲ್ಲರ ಚಿತ್ತ ಇದೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಮಂಡಿಸಿರುವ ಅವಿಶ್ವಾಸ ಗೊತ್ತುವಳಿ ಕುರಿತ ಚರ್ಚೆಯಲ್ಲಿ ರಾಹುಲ್ ಗಾಂಧಿ ಅವರು ಕೂಡ ಭಾಗವಹಿಸಬೇಕು ಎಂಬುದು ಕಾಂಗ್ರೆಸ್ ನಾಯಕರ ಅಭಿಪ್ರಾಯ.ಹೀಗಾಗಿ ಸೋಮವಾರದ ಕಲಾಪದಲ್ಲಿ ಅವರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಮೇಲೆ ಕಾಂಗ್ರೆಸ್ ನಾಯಕನಿಗೆ ಸಂಸತ್ ಸದಸ್ಯತ್ವವನ್ನು ಮರಳಿ ನೀಡುವ ಕುರಿತು ಒತ್ತಡ ಹೇರಲು ನಾಯಕರು ಸಜ್ಜಾಗಿದ್ದಾರೆ ಎಂದು ತಿಳಿದುಬಂದಿದೆ.
ಅಷ್ಟೇ ಅಲ್ಲ, ಸೋಮವಾರ ಸಂಸತ್ ಸದಸ್ಯತ್ವ ಮರಳದಿದ್ದರೆ, ಮಂಗಳವಾರವೇ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.
ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ದೋಷಿ ಎಂಬುದಾಗಿ ಘೋಷಿಸಿದ ಸೂರತ್ ನ್ಯಾಯಾಲಯದ ತೀರ್ಪು ಎತ್ತಿ ಹಿಡಿದಿದ್ದ ಗುಜರಾತ್ ಹೈಕೋರ್ಟ್ ತೀರ್ಪು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಶಿಕ್ಷೆಗೆ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.
ರಾಹುಲ್ ಗಾಂಧಿ ಅವರಿಗೆ ಗರಿಷ್ಠ ಶಿಕ್ಷೆ ವಿಧಿಸಲು ಅಧೀನ ನ್ಯಾಯಾಲಯವು ಸರಿಯಾದ ಕಾರಣ ನೀಡಿಲ್ಲ. ಹಾಗಾಗಿ, ಶಿಕ್ಷೆಗೆ ತಡೆಯಾಜ್ಞೆ ನೀಡಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟನೆ ನೀಡಿದೆ.