ಬೆಂಗಳೂರು,ಆ 07 (DaijiworldNews/AK): ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಆ.15ರ ನಂತರ ಜೆಡಿಎಸ್ ಪಕ್ಷದ ನಾಯಕರು, ಮುಖಂಡರು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಜೆಡಿಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಜೆಡಿಎಸ್ ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಬರುವ ಲೋಕಸಭೆ ಚುನಾವಣೆಗೆ ಸಿದ್ಧತೆ, ಪಕ್ಷ ಸಂಘಟನೆ ಹಾಗೂ ನೂತನ ಕೋರ್ ಕಮಿಟಿ ರಚನೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಯಿತು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಆಗಿರುವ ಹಿನ್ನಡೆಯ ಬಗ್ಗೆ ಎದೆಗುಂದದೆ ಪಕ್ಷದ ಸಂಘಟನೆ ಕಡೆ ಹೆಚ್ಚು ಗಮನ ನೀಡಬೇಕು ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ತಾಕೀತು ಮಾಡಿದ್ದು,ಅವರ ಆದೇಶದಂತೆ ಪಕ್ಷ ಸಂಘಟನೆಗೆ ಬಹಳಷ್ಟು ಒತ್ತು ಕೊಟ್ಟು ಕೆಲಸ ಮಾಡಲು ನಿರ್ಧರಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಜಿ.ಟಿ. ದೇವೇಗೌಡ ಅಧ್ಯಕ್ಷತೆಯಲ್ಲಿ ನೂತನ ಕೋರ್ ಕಮಿಟಿ ರಚನೆಗೆ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಯಿತು. ಮಾಜಿ ಶಾಸಕ ವೈ.ಎಸ್.ವಿ.ದತ್ತಾ ಅವರು ಈ ಕಮಿಟಿಗೆ ಸಂಚಾಲಕರಾಗಿರುತ್ತಾರೆ. ಒಟ್ಟು 20 ಸದಸ್ಯರು ಕಮಿಟಿಯಲ್ಲಿ ಇರುತ್ತಾರೆ ಎಂದು ಮಾಹಿತಿ ನೀಡಿದರು. ಪಕ್ಷದ ಸಂಘಟನೆ ಹಾಗೂ ಲೋಕಸಭೆ ಚುನಾವಣೆಗೆ ಪಕ್ಷವನ್ನು ಅಣಿಗೊಳಿಸುವ ನಿಟ್ಟಿನಲ್ಲಿ ಆಗಸ್ಟ್ 15ರ ನಂತರ ರಾಜ್ಯಾದ್ಯಂತ ಪಕ್ಷದ ಪ್ರಮುಖ ಮುಖಂಡರು ಪ್ರವಾಸ ಮಾಡಲಿದ್ದಾರೆ. ನಾನೂ ಸೇರಿ ಪಕ್ಷದ ಬಹುತೇಕ ಹಿರಿಯ ನಾಯಕರು ಪ್ರವಾಸ ಕೈಗೊಳ್ಳಲಿದ್ದೇವೆ ಎಂದು ಕುಮಾರಸ್ವಾಮಿ ತಿಳಿಸಿದರು.