ಬೆಂಗಳೂರು, ಆ 12 (DaijiworldNews/AK): ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿನ ಕಟ್ಟದಲ್ಲಿ ನಡೆದ ಅಗ್ನಿ ಅವಘಡ ಪ್ರಕರಣ ಸಂಬಂಧ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಬಿಬಿಎಂಪಿ ಕಚೇರಿಯ ಅಗ್ನಿ ಅನಾಹುತದಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿ ಎಲ್ಲರನ್ನೂ ಟ್ರಾಮಾ ಸೆಂಟರ್ ಗೆ ಶಿಫ್ಟ್ ಮಾಡಿ ಉತ್ತಮ ಚಿಕಿತ್ಸೆ ನೀಡಲು ಸೂಚಿಸಿದರು.
ಘಟನೆ ಬಗ್ಗೆ ಪ್ರತ್ಯೇಕ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಮತ್ತು ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದರು.
ವಿಕ್ಟೋರಿಯಾ ಆಸ್ಪತ್ರೆ ಬಳಿಕ ಬಿಬಿಎಂಪಿ ಕೇಂದ್ರ ಕಚೇರಿಯ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಘಟನೆಯ ಕುರಿತು ವಿವರವಾದ ಮಾಹಿತಿಯನ್ನು ಪಡೆದುಕೊಂಡರು.
ಡಿಸಿಎಂ ಡಿ.ಕೆ.ಶಿವಕುಮಾರ್ , ಸಚಿವರಾದ ರಾಮಲಿಂಗಾರೆಡ್ಡಿ ಮತ್ತು ಭೈರತಿ ಸುರೇಶ್ ಅವರುಗಳು ಜತೆಗಿದ್ದರು.