ಬೆಂಗಳೂರು, ಆ 12 (DaijiworldNews/HR): ನನ್ನ ಅನುಭವ ಬಳಸಿಕೊಳ್ಳುವುದು, ಬಿಡುವುದು ಹೈಕಮಾಂಡ್ಗೆ ಬಿಟ್ಟಿದ್ದು ಎಂದು ಹೇಳುವ ಮೂಲಕ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ವಿ ಸೋಮಣ್ಣ ಮತ್ತೆ ಬೇಡಿಕೆ ಇಟ್ಟಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಂತೆ ಬಿಜೆಪಿಯಲ್ಲೂ 2 ಕಾರ್ಯಾಧ್ಯಕ್ಷ ಹುದ್ದೆ ಸೃಷ್ಟಿಸಲಿ. ಆ ಮೂಲಕ ನಾವು ಹಾಗೇ ಕೆಲಸ ಮಾಡಬಹುದು. ನನಗೆ ಅವಕಾಶ ನೀಡಿದರೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗಿಂತ ವೇಗವಾಗಿ ಕೆಲಸ ಮಾಡುತ್ತೇನೆ ಎಂದರು.
ಇನ್ನು ಕಮಿಷನ್ ಆರೋಪ ವಿಚಾರವಾಗಿ ಮಾತನಾಡಿದ ಅವರು, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೇಳಿರುವುದೆಲ್ಲಾ ಸತ್ಯ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದರು. ಆದರೆ ಈಗ ಯಾಕೆ ಕೆಂಪಣ್ಣ ಹೇಳಿಕೆಯನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ ಎಂದು ಪ್ರಶ್ನಿಸಿದ್ದಾರೆ.