ಬೆಂಗಳೂರು, ಆ 23 (DaijiworldNews/HR): ರಾಜ್ಯದ ಹಿತ ಕಾಪಾಡಲು ನಾವು ಎಂದಿಗೂ ಬದ್ಧರಾಗಿರುತ್ತೇವೆ. ಮೇಕೆದಾಟು, ಕಾವೇರಿ, ಮಹಾದಾಯಿ, ಕೃಷ್ಣಾ ಸಮಸ್ಯೆಗಳ ಕುರಿತು ಪ್ರಧಾನ ಮಂತ್ರಿಗಳ ಬಳಿ ಸರ್ಕಾರಕ್ಕೆ ಸರ್ವಪಕ್ಷ ನಿಯೋಗ ತೆರಳೋಣ, ಇದಕ್ಕೆ ಎಲ್ಲರ ಸಹಕಾರ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬುಧವಾರ ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 5-6 ವರ್ಷಗಳಿಗೊಮ್ಮೆ ಮಳೆಯ ಕೊರತೆಯಿಂದಾಗಿ ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಂಕಷ್ಟ ಎದುರಾಗುತ್ತದೆ. ಈ ಕುರಿತು ಸಂಕಷ್ಟ ಹಂಚಿಕೆ ಸೂತ್ರ ನಿರ್ದಿಷ್ಟಪಡಿಸಿಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟ್ನಲ್ಲಿ ವಕೀಲರು ಸಮರ್ಥವಾಗಿ ವಾದ ಮಂಡಿಸಬೇಕು ಎಂದರು.
ಇನ್ನು ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಡಿವಿ ಸದಾನಂದ ಗೌಡ, ವೀರಪ್ಪ ಮೊಯಿಲಿ, ಜಗದೀಶ್ ಶೆಟ್ಟರ್, ಹೆಚ್ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಸಂಸದರಾದ ಸುಮಲತಾ, ಜಗ್ಗೇಶ್, ಡಾ. ಹನುಮಂತಯ್ಯ, ಮುನಿಸ್ವಾಮಿ, ಜಿಎಂ ಸಿದ್ದೇಶ್ವರ, ಜಿಸಿ ಚಂದ್ರಶೇಖರ್, ಶಾಸಕ ದರ್ಶನ್ ಪುಟ್ಟಣ್ಣಯ್ಯ ಮೊದಲಾದವರು ರಾಜ್ಯದ ಕಾನೂನು ಹೋರಾಟಕ್ಕೆ ಬೆಂಬಲ ಸೂಚಿಸಿದರು.