ಹುಬ್ಬಳ್ಳಿ, ಆ 25 (DaijiworldNews/AK): ಕಾಂಗ್ರೆಸ್ ಪಕ್ಷದವರ ಆಪರೇಷನ್ ಹಸ್ತ ಯಶಸ್ವಿ ಆಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸೋಲಿನ ಭೀತಿ ಇದೆ. ರಾಜ್ಯದಲ್ಲಿ ಹೆಚ್ಚು ಲೋಕಸಭಾ ಸೀಟು ಬರಲ್ಲ ಅಂತ ಮಾಹಿತಿ ಇದೆ. ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲದಿದ್ದರೇ ಕಾಂಗ್ರೆಸ್ ಸರ್ಕಾರದ ಭವಿಷ್ಯಕ್ಕೆ ಸಮಸ್ಯೆ ಇದೆ. ಹೀಗಾಗಿ ರಾಜ್ಯದಲ್ಲಿ ಆಪರೇಷನ್ ಹಸ್ತಕ್ಕೆ ಕಾಂಗ್ರೆಸ್ ಪಕ್ಷ ಕೈ ಹಾಕಿದೆ ಎಂದು ಭವಿಷ್ಯ ನುಡಿದರು.
ಇನ್ನು ರಾಜ್ಯದಲ್ಲಿ ಮಳೆ ಬಾರದೆ, ಬೆಳೆಗಳಿಗೆ ನೀರಿಲ್ಲದೆ ರೈತರು ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡಬೇಕು.ಕುಡಿಯುವ ನೀರು, ಬೆಳೆ ಸಮೀಕ್ಷೆ ಮಾಡಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ವರ್ಗಾವಣೆ ದಂದೆ ಸೇರಿದಂತೆ ಹಲವು ವಿಚಾರದಲ್ಲಿ ತಮ್ಮ ಸ್ವಹಿತಾಸಕ್ತಿಗಾಗಿ ಕಾಂಗ್ರೆಸ್ನವರು ಬಡಿದಾಡುತ್ತಿದ್ದಾರೆ. ಇದು ರಾಜ್ಯದ ದುಸ್ಥಿತಿ ಹಾಗೂ ವಿಪರ್ಯಾಸ ಎಂದರು.