ಬೆಳಗಾವಿ, ಆ 27 (DaijiworldNews/SM): ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಹಣ ದುರುಪಯೋಗ ಹಾಗೂ ಶೇ.40 ಕಮಿಷನ್ ಅವ್ಯವಹಾರದ ಬಗ್ಗೆ ವಿಸ್ತೃತ ತನಿಖೆ ನಡೆಸಲು ಇದು ಸೂಕ್ತ ಸಮಯ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭಾನುವಾರ ಹೇಳಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ 19 ಪರಿಸ್ಥಿತಿಯಲ್ಲಿ ಹಣ ದುರುಪಯೋಗಪಡಿಸಿಕೊಂಡ ಬಗ್ಗೆ ತನಿಖೆ ನಡೆಸುವಂತೆ ನಾವು ವಿಪಕ್ಷದಲ್ಲಿದ್ದಾಗಲೇ ಸರ್ಕಾರದ ಮೇಲೆ ಒತ್ತಡ ಹೇರಿದ್ದೆವು. ಈಗ ನಮ್ಮ ಸರ್ಕಾರ ಅಧಿಕಾರದಲ್ಲಿದೆ. ಹೀಗಾಗಿ ವಿಚಾರಣೆ ನಡೆಸಲು ಇದು ಸರಿಯಾದ ಸಮಯ. ಸರ್ಕಾರದ ವಿವಿಧ ತನಿಖಾ ಸಂಸ್ಥೆಗಳು ಈಗಾಗಲೇ ತಮ್ಮ ಕೆಲಸ ಆರಂಭಿಸಿವೆ. ವರದಿ ಸಲ್ಲಿಸಿದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.