ಮೈಸೂರು,ಸೆ 22 (DaijiworldNews/AK): ರಾಜ್ಯ ಮತ್ತು ದೇಶದ ಹಿತದೃಷ್ಟಿಯಿಂದ ಎನ್ ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಸೇರ್ಪಡೆಯಾಗಲು ತೀರ್ಮಾನ ಮಾಡಿರುವುದನ್ನು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಸ್ವಾಗತಿಸಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯಿಸಿ ಅವರು, ಈ ಮೈತ್ರಿಯಿಂದ ಎರಡೂ ಪಕ್ಷಗಳಿಗೆ ಶಕ್ತಿ ಬರಲಿದೆ ಎಂದರು.
ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರು ಒಟ್ಟಿಗೆ ಕುಳಿತು ದೇಶದ ಹಿತಾಸಕ್ತಿ, ರಾಜ್ಯದ ಗಮನವನ್ನು ಇಟ್ಟುಕೊಂಡು ಸಮಾಲೋಚನೆ ಮಾಡಿದ್ದರು. ದೇಶದ ಹಿತಕ್ಕಾಗಿ ಜೆಡಿಎಸ್, ಎನ್ ಡಿಎ ಭಾಗವಾಗಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ ಬಳಿಕ ಎನ್ ಡಿಎ ಭಾಗವಾಗಿ ಇರಲು ತೀರ್ಮಾನ ಮಾಡಿರುವುದು ಒಳ್ಳೆಯ ತೀರ್ಮಾನವಾಗಿದೆ.
ಕರ್ನಾಟಕದಲ್ಲಿ ಈ ಎರಡೂ ಪಕ್ಷಗಳಮೈತ್ರಿಯಿಂದ ಮುಂದಿನ ದಿನಗಳಲ್ಲಿ ಎರಡು ಪಕ್ಷಗಳಿಗೆ ದೊಡ್ಡ ಶಕ್ತಿ ಬರಲಿದೆ ಮತ್ತು ಇದರಿಂದ ಅನುಕೂಲ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.