ಬೆಂಗಳೂರು, ಸೆ 29 (DaijiworldNews/MS): ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಇಂದು ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಸಭೆಯಲ್ಲೂ ಕರ್ನಾಟಕಕ್ಕೆ ತೀವ್ರ ಹಿನ್ನಡೆಯಾಗಿದ್ದುಅ.15 ರವರೆಗೆ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಪಾಲಿಸುವಂತೆ ಸೂಚನೆ ನೀಡಿದೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ರಾಜ್ಯದಲ್ಲಿ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಈ ಆದೇಶ ಹೊರಬಿದ್ದಿದ್ದು ,ಕರ್ನಾಟಕ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ.
ಮಳೆ ಕೊರತೆಯಿಂದ ರಾಜ್ಯದಲ್ಲಿ ನೀರು ಕೊರತೆ ಇರುವುದನ್ನು ಸಿಡಬ್ಲ್ಯುಎಂಎ ಗಮನಿಸಬೇಕು. 161 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿದೆ. ರಾಜ್ಯದ ರೈತರು, ಜನರ ಆಕ್ರೋಶ ಹೆಚ್ಚಾಗಿದ್ದು ಸರಣಿ ಬಂದ್ ನಡೆಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಮತ್ತೆ ನೀರು ಹರಿಸುವುದು ಅಸಾಧ್ಯವೆಂದು ಕರ್ನಾಟಕ ಪರ ಅಧಿಕಾರಿಗಳು ವಾದ ಮಂಡಿಸಿದ್ದರು.
ಜೂನ್ನಿಂದ ಸೆಪ್ಟೆಂಬರ್ವರೆಗೆ ಕರ್ನಾಟಕ 123 ಟಿಎಂಸಿ ನೀರು ಹರಿಸಬೇಕಿತ್ತು. ಆದರೆ, ಈವರೆಗೆ ಕೇವಲ 40 ಟಿಎಂಸಿ ನೀರು ಮಾತ್ರ ಹರಿಸಿದೆ. ಬಾಕಿ 83 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಸೂಚಿಸಬೇಕು ಎಂದು ಸಿಡಬ್ಲ್ಯುಎಂಎ ಸಭೆಯಲ್ಲಿ ತಮಿಳುನಾಡು ಸರ್ಕಾರದ ಪರ ಅಧಿಕಾರಿಗಳು ವಾದ ಮಂಡನೆ ಮಾಡಿದ್ದರು.
ಆದರೆ ಸಭೆಯಲ್ಲಿ CWRC ಆದೇಶ ಪಾಲಿಸುವಂತೆ CWMA ಕರ್ನಾಟಕ್ಕೆ ಸೂಚನೆ ನೀಡಿದೆ.