ಬೆಂಗಳೂರು,ಏ12(AZM): ರಾಜ್ಯದ ವಿವಿಧೆಡೆ ನಡೆದ ಐಟಿ ದಾಳಿಯನ್ನು ವಿರೋಧಿಸಿ ಮಾ.28ರಂದು ಆದಾಯ ತೆರಿಗೆ ಇಲಾಖಾ ಕಚೇರಿ ಮುಂಭಾಗ ನಡೆದ ಪ್ರತಿಭಟನೆ ಹಿನ್ನೆಲೆಯಲ್ಲಿ ಬಾಣಸವಾಡಿ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಮುಖಂಡರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಸಿಎಂ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಸಂಪುಟದ ಕೆಲ ಸದಸ್ಯರು ಹಾಗೂ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಹಾಗೂ ಇತರೆ ಮುಖಂಡರಿಗೆ ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ತನಿಖಾಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಬೇಕು ಎಂದು ನೋಟಿಸ್ನಲ್ಲಿ ಉಲ್ಲೇಖೀಸಲಾಗಿದೆ.
ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಚುನಾವಣಾ ಆಯೋಗದ ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿರುವ ಬಗ್ಗೆ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಡಿ.ಎನ್.ರಾಜಶೇಖರ್ ಮೂರ್ತಿ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಶಿವಾಜಿನಗರದ ಕಾಂಗ್ರೆಸ್ ಹಾಗೂ ಜೆಡಿಎಸ್ನ ಬ್ಲಾಕ್ ಕಾರ್ಯದರ್ಶಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇದರ ಬೆನ್ನಲ್ಲೇ ಕರ್ನಾಟಕ ಮತ್ತು ಗೋವಾ ವಿಭಾಗ ಆದಾಯ ತೆರಿಗೆ ಇಲಾಖೆ ಪ್ರಧಾನ ಆಯುಕ್ತ ಬಾಲಕೃಷ್ಣನ್ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ರಾಜ್ಯ ಪೊಲೀಸ್ ಮಹಾನಿರ್ದೇ ಶಕರಿಗೂ ಈ ಬಗ್ಗೆ ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು.
ಈ ಸಂಬಂಧ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿರುವುದರಿಂದ ಬಾಣಸವಾಡಿ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆಸಲು ಹಿರಿಯ ಅಧಿಕಾರಿಗಳು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಈಗಾಗಲೇ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಹೆಚ್ಚುವರಿ ಸೆಕ್ಷನ್ಗಳನ್ನು ಅಳವಡಿಸಿಕೊಂಡು ನೋಟಿಸ್ ಜಾರಿ ಮಾಡಲಾಗಿದೆ.