ಬೆಂಗಳೂರು, ಅ 09 (DaijiworldNews/HR): ಈ ಕಾಂಗ್ರೆಸ್ ಸರ್ಕಾರ ಪತನವಾಗಲಿದ್ದು, 2024ರಲ್ಲಿ ಮತ್ತೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂಬ ಹೆಚ್ಡಿ ಕುಮಾರಸ್ವಾಮಿ ಅವರ ಭವಿಷ್ಯಕ್ಕೆ ತಿರುಗೇಟು ನೀಡಿರುವ ಸಂಸದ ಡಿಕೆ ಸುರೇಶ್, ಕುಮಾರಸ್ವಾಮಿ ಹೇಳುವುದು ಸುಳ್ಳಿನ ಮಹಾ ಭಾಗ, ಸುಳ್ಳಿನಲ್ಲಿ ಕುಮಾರಸ್ವಾಮಿ ಎಕ್ಸಪರ್ಟ್. ಇವರು ಯಾವ ಯಾವ ಸಂದರ್ಭದಲ್ಲಿ ಯಾರ ಜೊತೆಗೆ ಹೇಗೆ ನಡೆದುಕೊಳ್ಳುತ್ತಾರೆ ಎನ್ನುವುದು ಗೊತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಕಾಂಗ್ರೆಸ್ ಸರ್ಕಾರ ಪತನವಾಗಲಿದ್ದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತೆ ತಿಹಾರ್ ಜೈಲಿಗೆ ಹೋಗಲಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆ ಸುರೇಶ್, ಡಿಕೆ ಶಿವಕುಮಾರ್ ಅವರನ್ನು ತಿಹಾರ್ ಜೈಲಿಗೆ ಕಳಿಸಿ ಎಂದು ಅಮಿತ್ ಶಾಗೆ ಇವರೇ ಮನವಿ ಮಾಡಿ ಬಂದಿರಬೇಕು ಎಂದು ತಿರುಗೇಟು ನೀಡಿದ್ದಾರೆ.
ಇನ್ನು ಜೆಡಿಎಸ್ ನಾಯಕರು ಎಲ್ಲೋ ಒಂದು ಕಡೆ ಮಾನಸಿಕವಾಗಿ ಕುಗ್ಗಿದ್ದಾರೆ. ಅವರ ಕಾರ್ಯಕರ್ತರನ್ನು ಉಳಿಸಿಕೊಳ್ಳಬೇಕಿದೆ. ಅವರ ಆಲೋಚನೆಗಳೆಲ್ಲ ಒಂದು ಕಡೆ ಕೇಂದ್ರಿಕೃತ ಆದಂತೆ ಕಾಣುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.